ಕರವೇ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಈಗಾಗಲೇ ಶಾಲಾ ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಜಾತಿ-ಆದಾಯ ಪ್ರಮಾಣ ಪತ್ರಗಳ ಅಗತ್ಯವಿದೆ. ಜತೆಗೆ ಪೊಲೀಸ್ ಕಾನ್ಸ್‌ಟೇಬಲ್ ಸೇರಿದಂತೆ ಸರ್ಕಾರ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಾಖಲಾತಿಗಳ ಅವಶ್ಯಕತೆ ಇದೆ. ಆದ್ದರಿಂದ ಪ್ರಮಾಣ ಪತ್ರಗಳ ವಿತರಣೆಯಲ್ಲಿ ವಿಳಂಬವಾಗದಂತೆ ತಾಲೂಕು ಆಡಳಿತ ಕ್ರಮ ಕೈಗೊಳ್ಳಬೇಕು. ತಾಲೂಕು ಕಚೇರಿಯಲ್ಲಿ ಬಗರ್ ಹುಕುಂ ಕಮಿಟಿ ಸಂಬಂಧಿತ ಕಾರ್ಯಗಳಿಗೆ ಸಂಬಂಧಿಸಿದಂತೆ ಆರ್‌ಐ, ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ಸಾಕಷ್ಟು ಸಿಬ್ಬಂದಿ ರಜೆಯಲ್ಲಿರುವುದರಿಂದ ಕಚೇರಿ ಕೆಲಸಗಳ ಮೇಲೆ ಪರಿಣಾಮ ಬೀರಿದ್ದು ಇದರಿಂದ ಸಾರ್ವಜನಿಕ ಕೆಲಸಗಳಲ್ಲಿ ವಿಳಂಬದ ಕಾರಣ ವಿದ್ಯಾರ್ಥಿಗಳು, ರೈತರು ಸಮಸ್ಯೆ ಎದುರಿಸುವಂತಾಗಿದೆ. ಈ ಬಗ್ಗೆ ಪರಿಶೀಲಿಸಿ ತಕ್ಷಣವೇ ಹಿರಿಯ ಅಧಿಕಾರಿಗಳು ಗಮನ ಹರಿಸಿ ಸಿಬ್ಬಂದಿ ಕೊರತೆ ಪರಿಹರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿ ಕೊಡಲು ಮುಂದಾಗಬೇಕು ಎಂದರು.