ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ

ನಗರಸಭೆ ಆಡಳಿತಾಧಿಕಾರಿಯಾಗಿ ನಿಯೋಜನೆಗೊಂಡ ಬಳಿಕ ಮೊದಲ ಬಾರಿಗೆ ನಗರಸಭೆ ಕಾರ್ಯಾಲಯಕ್ಕೆ ಮಂಗಳವಾರ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿ
ನಗರಸಭೆ ಆಡಳಿತಾಧಿಕಾರಿಯಾಗಿ ನಿಯೋಜನೆಗೊಂಡ ಬಳಿಕ ಮೊದಲ ಬಾರಿಗೆ ನಗರಸಭೆ ಕಾರ್ಯಾಲಯಕ್ಕೆ ಮಂಗಳವಾರ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿ
Published on
ಅರಸೀಕೆರೆ: ನಗರ ನಿವಾಸಿಗಳ ಕುಂದುಕೊರತೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಹೇಳಿದರು.
ನಗರಸಭೆ ಆಡಳಿತಾಧಿಕಾರಿಯಾಗಿ ನಿಯೋಜನೆಗೊಂಡ ಬಳಿಕ ಮೊದಲ ಬಾರಿಗೆ ನಗರಸಭೆ ಕಾರ್ಯಾಲಯಕ್ಕೆ ಮಂಗಳವಾರ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಕುಡಿಯುವ ನೀರು, ರಸ್ತೆ, ನೈರ್ಮಲ್ಯ ಕಾಪಾಡುವುದು ಸೇರಿದಂತೆ ಜನರಿಗೆ ಮೂಲ ಸೌಲಭ್ಯಗಳನ್ನು ವ್ಯವಸ್ಥಿತ ರೀತಿಯಲ್ಲಿ ತಲುಪಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂಬುದನ್ನು ಮರೆಯಬಾರದು ಎಂದು ತಿಳಿಸಿದರು.
ನಗರದಲ್ಲಿ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನಗರಸಭೆ ಆಡಳಿತ ವರ್ಗವು ಕಾರ್ಯೋನ್ಮುಖವಾಗಿದ್ದು, ಉತ್ತಮ ಸೇವೆ ಸಲ್ಲಿಸಲು ಸದಾ ಸಿದ್ಧವಿದೆ. ನಗರದಲ್ಲಿ ಒಳಚರಂಡಿ ಸಮಸ್ಯೆ ಕಂಡು ಬಂದಿದ್ದು, ಇದರಿಂದ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರು ಅನೇಕ ದೂರುಗಳನ್ನು ಗಮನಕ್ಕೆ ತಂದಿದ್ದಾರೆ. ನಗರೋತ್ಥಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ನಡೆದಿರುವ ಕಾಮಗಾರಿಗಳ ಮಾಹಿತಿ ಪಡೆದು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೆಲ ಬಡಾವಣೆಗಳಲ್ಲಿ ಕೊಳಚೆ ನೀರು ರಸ್ತೆಯ ಮೇಲೆ ಹರಿಯುವ ಜತೆಯಲ್ಲಿ ಮಳೆ ಬಂದಾಗ ಮನೆಗಳಿಗೆ ನುಗ್ಗಿ ಸಮಸ್ಯೆ ಸೃಷ್ಟಿಯಾಗುತ್ತಿದ್ದು, ಪರಿಹರಿಸಲು ಯೋಜನೆ ರೂಪಿಲಾಗುವುದು ಎಂದರು.
ನಗರದ ಮಧ್ಯೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳ ಚರಂಡಿಗಳಲ್ಲಿ ತ್ಯಾಜ್ಯ ತುಂಬಿದ್ದು, ಸ್ವಚ್ಛತೆಗೆ ಸೂಚಿಸಲಾಗಿದೆ. ಜತೆಗೆ ಚರಂಡಿ ಮೇಲಿನ ಅಂಗಡಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ನಗರ ಪ್ರದೇಶದಲ್ಲಿ ಪಾರ್ಕಿಂಗ್ ವ್ಯವಸ್ಥೆಯ ಸಮಸ್ಯೆಯಿದ್ದು, ಬಗೆಹರಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಸಭೆ ಕರೆದು ಪರ್ಯಾಯ ವ್ಯವಸ್ಥೆಗಳೊಂದಿಗೆ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದರು.
ಸಂತೆಮೈದಾನ ಆವರಣದಲ್ಲಿ ಪ್ರತಿ ಶುಕ್ರವಾರ ನಡೆಯುತ್ತಿದ್ದ ರೈತರ ಸಂತೆಗೆ ಹೊಸ ಕಟ್ಟಡ ನಿರ್ಮಾಣದಿಂದ ಜಾಗದ ಕೊರತೆ ಎದುರಾಗಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು. ಬೀದಿದೀಪಗಳ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಗರದ ಇಂದಿರಾ ನಗರದಲ್ಲಿರುವ ಮನೆಗಳು ಅಪೂರ್ಣವಾಗಿದೆ ಎಂದು ಸಾರ್ವಜನಿಕರಿಂದ ದೂರು ಬಂದಿವೆ. ಸ್ಥಳಕ್ಕೆ ಭೇಟಿ ನೀಡುವುದರ ಮೂಲಕ ಸ್ಲಂಬೋರ್ಡ್ ಅಧಿಕಾರಿಗಳ ಸಭೆ ಕರೆದು ಬಗೆಹರಿಸಲಾಗುವುದು. ಶಾಲಾ ವಲಯ ಹಾಗೂ ಮುಖ್ಯ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಸಮೀಪ ರಸ್ತೆ ಉಬ್ಬುಗಳ ಹಾಕಿಸಲಾಗುವುದು. ಸಮಸ್ಯೆ ಹೊತ್ತು ಜನರು ಕಚೇರಿಗೆ ಬಾರದಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಜಿಲ್ಲಾ ನಗರಾಭಿವೃದ್ಧಿ ಕೋಶ ನಿರ್ದೇಶಕ ರುದ್ರಮುನಿ, ಗ್ರೇಡ್-2 ತಹಸೀಲ್ದಾರ್ ಪಾಲಾಕ್ಷ, ಪೌರಾಯುಕ್ತ ಕೃಷ್ಣಮೂರ್ತಿ, ವ್ಯವಸ್ಥಾಪಕಿ ಕಲಾವತಿ, ಕಂದಾಯ ನಿರೀಕ್ಷಕ ಮಂಜುನಾಥ್, ಹಿರಿಯ ಆರೋಗ್ಯ ನಿರೀಕ್ಷಕ ಲಿಂಗರಾಜು, ರೇವಣ್ಣ ಸಿದ್ದಪ್ಪ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net