ಅರಕಲಗೂಡು ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಶಾಸಕ ಎ. ಮಂಜು, ಬಸವರಾಜು, ಬಾಲಾಜಿ, ಬೋರಣ್ಣ ಇತರರದ್ದರು.
ಅರಕಲಗೂಡು:ವಿದ್ಯಾರ್ಥಿಗಳು ಕಲಿಕೆಗೆ ಹೆಚ್ಚು ಒತ್ತ ನೀಡಿದರೆ ಉನ್ನತ ಬದುಕು ರೂಪಿಸಿಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಶ್ರಮಿಸಿದರೆ ಯಶಸ್ಸು ಕಂಡುಕೊಳ್ಳಬಹುದಾಗಿದೆ ಎಂದು ಶಾಸಕ ಎ. ಮಂಜು ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಲ್ಲಿ ಉತ್ತಮ ಜ್ಞ್ಞಾನ, ಪ್ರತಿಭೆ ಹಾಗೂ ಸಾಮರ್ಥ್ಯ ಅಡಗಿರುತ್ತದೆ. ಪಿಯು ಶಿಕ್ಷಣವು ಜೀವನದ ಮಹತ್ವದ ಘಟ್ಟವಾಗಿದ್ದು, ಈ ಅವಧಿಯನ್ನು ಸಮರ್ಪಕವಾಗಿ ಬಳಸಿಕೊಂಡು ಉನ್ನತ ಶಿಕ್ಷಣ ಹಾಗೂ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಶಿಕ್ಷಣದ ಮೂಲಕವೇ ಸಮಾಜದಲ್ಲಿ ಸಕಾರಾತ್ಮಕ ಪರಿವರ್ತನೆ ತರಲು ಸಾಧ್ಯ ಎಂದು ತಿಳಿಸಿದರು.
ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಉತ್ತಮ ಶಿಕ್ಷಣ ನೀಡುವಲ್ಲಿ ತಾಲೂಕಿನಲ್ಲಿಯೇ ಹೆಸರುವಾಸಿಯಾಗಿದೆ. ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ವಿದ್ಯಾಭ್ಯಾಸ ಮಾಡಿ ತಂದೆ-ತಾಯಿ, ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗೆ ಕೀರ್ತಿ ತರಬೇಕು. ಉತ್ತಮ ನಾಗರಿಕರಾಗಿ ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.
ಸರ್ಕಾರಿ ಕಾಲೇಜುಗಳಲ್ಲಿ ಹೆಚ್ಚಾಗಿ ರೈತರ ಕುಟುಂಬದ ಹೆಣ್ಣುಮಕ್ಕಳೇ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ರೈತರ ಸಂಕಷ್ಟ ಮತ್ತು ಶ್ರಮದ ಬಗ್ಗೆ ಅವರಿಗೆ ಅರಿವಿದೆ. ಆದರೂ ರೈತರ ಮಕ್ಕಳಿಗೆ ಹೆಣ್ಣು ಕೊಡಲು ಸಮಾಜ ಹಿಂದೇಟು ಹಾಕುತ್ತಿರುವುದು ಬೇಸರದ ಸಂಗತಿ. ಕೃಷಿ ಹಾಗೂ ರೈತರ ಬದುಕಿಗೆ ಸಮಾಜ ಹೆಚ್ಚಿನ ಗೌರವ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಪ್ರಾಂಶುಪಾಲ ಅನಂತರಾಜು, ಉಪ ಪ್ರಾಂಶುಪಾಲ ಬೋರಣ್ಣ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಂಜುಶೆಟ್ಟಿಗೌಡ, ಸದಸ್ಯರಾದ ಸವಿತಾ ಸುರೇಶ್, ಮೋಹನ್, ಉಪನ್ಯಾಸಕ ಬಸವರಾಜು ಇತರರಿದ್ದರು.
ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.