ದ್ವಿಪಥ ರಸ್ತೆ ಕಾಮಗಾರಿ ಶೀಘ್ರ ಪೂರ್ಣ

ಆಲೂರು ಪಟ್ಟಣದ ಮುಖ್ಯ ರಸ್ತೆಯ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಲೂರು ಪಟ್ಟಣದ ಮುಖ್ಯ ರಸ್ತೆಯ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • road work
ಆಲೂರು: ಹಲವು ವರ್ಷಗಳಿಂದ ಸಾರ್ವಜನಿಕರ ನಿರೀಕ್ಷೆಯಾಗಿದ್ದ ಆಲೂರು ಮುಖ್ಯ ರಸ್ತೆ ದ್ವಿಪಥ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಂಡು ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ಆಲೂರು ಪಟ್ಟಣದ ಮುಖ್ಯ ರಸ್ತೆಯಲ್ಲಿ ಕೈಗೊಂಡಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿಯ ಬೈರಾಪುರ ಭಾಗದಿಂದ ಆಲೂರು ಪಟ್ಟಣದ ಮೂಲಕ ಹಾದು ಹೋಗಿ ಯಡೂರು ಸಮೀಪ ಮತ್ತೆ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಕಾಮಗಾರಿ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಸಾರ್ವಜನಿಕ ಬಳಕೆಗೆ ಮುಕ್ತಗೊಳ್ಳಲಿದೆ ಎಂದು ಹೇಳಿದರು. ಹಲವಾರು ವರ್ಷಗಳಿಂದ ಈ ರಸ್ತೆಯಲ್ಲಿ ಏಕಪಥ ವಾಹನ ಸಂಚಾರ ಮಾತ್ರ ಇರುವುದರಿಂದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಅಲ್ಲದೆ, ಸಂಚಾರ ದಟ್ಟಣೆ ಹಾಗೂ ಅಪಘಾತಗಳ ಸಂಖ್ಯೆಯೂ ಹೆಚ್ಚಾಗಿತ್ತು. ಶಾಸಕನಾಗಿ ಆಯ್ಕೆಯಾದ ಬಳಿಕ ಈ ರಸ್ತೆಯನ್ನು ದ್ವಿಪಥಗೊಳಿಸುವ ಅಗತ್ಯವನ್ನು ಸರ್ಕಾರದ ಗಮನಕ್ಕೆ ತಂದು ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದರು.
ರಸ್ತೆ ಅಭಿವೃದ್ಧಿ ಕಾಮಗಾರಿಯ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿದ್ದ ಮರಗಳು, ವಿದ್ಯುತ್ ಕಂಬಗಳು ಹಾಗೂ ಟ್ರಾನ್ಸ್‌ಫಾರ್ಮರ್‌ಗಳನ್ನು ಅಗತ್ಯಕ್ಕೆ ಅನುಗುಣವಾಗಿ ಸ್ಥಳಾಂತರಿಸಲಾಗಿದೆ. ಕೇವಲ ಮೂಲಸೌಕರ್ಯಕ್ಕೆ ಮಾತ್ರವಲ್ಲದೆ ಪರಿಸರ ಸಂರಕ್ಷಣೆಯತ್ತಲೂ ವಿಶೇಷ ಗಮನ ಹರಿಸಲಾಗಿದೆ. ರಸ್ತೆಯ ಮಧ್ಯಭಾಗದಲ್ಲಿ ಗಿಡಗಳನ್ನು ನೆಟ್ಟು ಸುಂದರ ಹಾಗೂ ಪರಿಸರ ಸ್ನೇಹಿ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಿಡಬ್ಲೂೃಡಿ ಕಿರಿಯ ಇಂಜಿನಿಯರ್ ಮಧು ಸೇರಿದಂತೆ ಮುಂತಾದವರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net