ಇಲಾಖಾ ಅಧಿಕಾರಿಗಳಲ್ಲಿ ಸಮನ್ವಯವಿರಲಿ

ಅರಕಲಗೂಡು ತಾಪಂ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎ. ಮಂಜು ಮಾತನಾಡಿದರು. ತಹಸೀಲ್ದಾರ್ ಕೆ.ಸಿ. ಸೌಮ್ಯಾ ಇದ್ದರು.
ಅರಕಲಗೂಡು ತಾಪಂ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎ. ಮಂಜು ಮಾತನಾಡಿದರು. ತಹಸೀಲ್ದಾರ್ ಕೆ.ಸಿ. ಸೌಮ್ಯಾ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • department
ಅರಕಲಗೂಡು: ತಾಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಎ. ಮಂಜು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಮಾತನಾಡಿದ ಅವರು, ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಕೆರೆ-ಕಟ್ಟೆಗಳು, ಕುಡಿಯುವ ನೀರಿನ ಮೂಲಗಳು ಹಾಗೂ ಕೃಷಿ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗುವ ಜತೆಗೆ ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಅಭಾವ ಎದುರಾಗುವ ಸಾಧ್ಯತೆ ಇದೆ. ಆದ್ದರಿಂದ ಯಾವುದೇ ಸಮಸ್ಯೆ ಉಂಟಾಗುವ ಮುನ್ನವೇ ಅಧಿಕಾರಿಗಳು ಯೋಜಿತವಾಗಿ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಲಭ್ಯತೆ ಕುರಿತು ನಿರಂತರ ಪರಿಶೀಲನೆ ನಡೆಸಬೇಕು. ನೀರಿನ ಮೂಲಗಳು ಬತ್ತುತ್ತಿರುವ ಪ್ರದೇಶಗಳನ್ನು ಗುರುತಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದರೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಸೇರಿದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಲು ಸಿದ್ಧರಾಗಿರಬೇಕು ಎಂದು ತಿಳಿಸಿದರು.
ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಪಶುಸಂಗೋಪನಾ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಮೇವು ಸಂಗ್ರಹ, ಮೇವು ಬ್ಯಾಂಕ್‌ಗಳ ಸ್ಥಾಪನೆ ಹಾಗೂ ಅಗತ್ಯವಿದ್ದರೆ ಮೇವು ವಿತರಣೆಗೆ ಯೋಜನೆ ರೂಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಬೆಳೆ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ ರೈತರಿಗೆ ಸೂಕ್ತ ಸಲಹೆ ನೀಡಬೇಕು. ಮಳೆ ಕೊರತೆಯ ಹಿನ್ನೆಲೆಯಲ್ಲಿ ಕಡಿಮೆ ನೀರು ಬೇಡುವ ಬೆಳೆಗಳ ಕುರಿತು ರೈತರಿಗೆ ಅರಿವು ಮೂಡಿಸಬೇಕು. ಬೆಳೆ ಹಾನಿ ಸಂಭವಿಸಿದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.
ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರು ಅಥವಾ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ತಹಸೀಲ್ದಾರ್ ಕೆ.ಸಿ. ಸೌಮ್ಯಾ ಮಾತನಾಡಿ, ತಾಲೂಕಿನಲ್ಲಿ ಮಳೆ ಪರಿಸ್ಥಿತಿ, ಕುಡಿಯುವ ನೀರಿನ ಲಭ್ಯತೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಿದರು. ಎಲ್ಲ್ಲ ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳು ಮತ್ತು ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಲಾಯಿತು.
ಸಭೆಯಲ್ಲಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳು, ಪಿಡಿಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net