ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಸಹಕಾರಿ

ಹಾಸನದ ಜಿಲ್ಲಾ ಯೋಗ ಸಂಸ್ಥೆಯಿಂದ ಏರ್ಪಡಿಸಿದ್ದ 6ನೇ ವರ್ಷದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯನ್ನು ಶ್ರೀ ಶಂಭುನಾಥ ಸ್ವಾಮೀಜಿ ಉದ್ಘಾಟಿಸಿದರು. ಯೋಗ ಸಂಸ್ಥೆಯ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷ ರಾಮಜೊಯಿಸ್, ಪ್ರಧಾನ ಕಾರ್ಯದರ್ಶಿ ನಿರಂಜನ ರಾಜ್, ಸಹಕಾರ್ಯದರ್ಶಿ ಮನೋಹರ್ ಇತರರಿದ್ದರು.
ಹಾಸನದ ಜಿಲ್ಲಾ ಯೋಗ ಸಂಸ್ಥೆಯಿಂದ ಏರ್ಪಡಿಸಿದ್ದ 6ನೇ ವರ್ಷದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯನ್ನು ಶ್ರೀ ಶಂಭುನಾಥ ಸ್ವಾಮೀಜಿ ಉದ್ಘಾಟಿಸಿದರು. ಯೋಗ ಸಂಸ್ಥೆಯ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷ ರಾಮಜೊಯಿಸ್, ಪ್ರಧಾನ ಕಾರ್ಯದರ್ಶಿ ನಿರಂಜನ ರಾಜ್, ಸಹಕಾರ್ಯದರ್ಶಿ ಮನೋಹರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಸಹಕಾರಿ
  • ಶ್ರೀ ಶಂಭುನಾಥ ಸ್ವಾಮೀಜಿ ಅಭಿಮತ
  • ಜಿಲ್ಲಾ ಮಟ್ಟದ ಸ್ಪರ್ಧೆ ಉದ್ಘಾಟನೆ
ಹಾಸನ: ಯೋಗವು ಭಾರತದ ಪ್ರಾಚೀನ ಸಂಸ್ಕೃತಿ ಹಾಗೂ ಋಷಿಮುನಿಗಳ ಅಮೂಲ್ಯ ಕೊಡುಗೆಯಾಗಿದೆ. ದೈಹಿಕ ಆರೋಗ್ಯ ಕಾಪಾಡುವುದರ ಜತೆಗೆ ಮನಸ್ಸಿನ ನೆಮ್ಮದಿ, ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಜೀವನದಲ್ಲಿ ಶಿಸ್ತನ್ನು ಬೆಳೆಸುವ ಶಕ್ತಿ ಯೋಗಕ್ಕಿದೆ ಎಂದು ಆದಿಚುಂಚನಗಿರಿ ಶಾಖಾ ಮಠಗಳಾದ ಕೊಡಗು, ಹಾಸನ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ಹೇಳಿದರು.
ನಗರದ ಶ್ರೀ ಆದಿಚುಂಚನಗಿರಿ ಶಾಖಾ ಮಠದಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾ ಯೋಗ ಸಂಸ್ಥೆ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ 6ನೇ ವರ್ಷದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮಾತನಾಡಿದರು.
ಇಂದಿನ ಯಾಂತ್ರಿಕ ಹಾಗೂ ಒತ್ತಡದ ಜೀವನದಲ್ಲಿ ಮಕ್ಕಳು ಮತ್ತು ಯುವಜನತೆ ಯೋಗಾಭ್ಯಾಸವನ್ನು ದಿನನಿತ್ಯದ ಬದುಕಿನ ಭಾಗವಾಗಿಸಿಕೊಳ್ಳಬೇಕು. ಮೊಬೈಲ್, ಕಂಪ್ಯೂಟರ್ ಹಾಗೂ ಇತರ ತಂತ್ರಜ್ಞಾನಗಳ ಬಳಕೆಯಿಂದ ಉಂಟಾಗುವ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ದೂರ ಮಾಡುವಲ್ಲಿ ಯೋಗ ಪರಿಣಾಮಕಾರಿಯಾಗಿದೆ. ವಿದ್ಯಾರ್ಥಿಗಳು ಪ್ರತಿನಿತ್ಯ ಯೋಗಾಭ್ಯಾಸ ಮಾಡುವ ಮೂಲಕ ಉತ್ತಮ ಆರೋಗ್ಯದ ಜತೆಗೆ ಶಿಕ್ಷಣದಲ್ಲೂ ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಯೋಗವು ಕೇವಲ ದೇಹದ ವ್ಯಾಯಾಮವಲ್ಲ, ಅದು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವ ಜೀವನ ಪದ್ಧತಿಯಾಗಿದೆ. ನಿಯಮಿತ ಯೋಗಾಭ್ಯಾಸದಿಂದ ಸಹನೆ, ಆತ್ಮನಿಯಂತ್ರಣ, ಸಕಾರಾತ್ಮಕ ಚಿಂತನೆ ಮತ್ತು ಸಮಾಜದತ್ತ ಜವಾಬ್ದಾರಿಯ ಮನೋಭಾವ ಬೆಳೆಯುತ್ತದೆ. ಪ್ರತಿಯೊಬ್ಬರೂ ಯೋಗವನ್ನು ಅಳವಡಿಸಿಕೊಂಡರೆ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲೆಯ ವಿವಿಧ ಶಾಲೆಗಳು ಹಾಗೂ ಕಾಲೇಜುಗಳಿಂದ ಆಗಮಿಸಿದ್ದ ನೂರಾರು ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಯಲ್ಲಿ ಭಾಗವಹಿಸಿ ಯೋಗಾಸನ ಪ್ರದರ್ಶನದ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಸನ ಜಿಲ್ಲಾ ಯೋಗ ಸಂಸ್ಥೆಯ ಅಧ್ಯಕ್ಷ ಕೃಷ್ಣಪ್ಪ ವಹಿಸಿದ್ದರು. ಉಪಾಧ್ಯಕ್ಷ ರಾಮಜೊಯಿಸ್, ಪ್ರಧಾನ ಕಾರ್ಯದರ್ಶಿ ನಿರಂಜನ ರಾಜ್, ಸಹಕಾರ್ಯದರ್ಶಿ ಮನೋಹರ್ ಸಂಸ್ಥೆಯ ಪದಾಧಿಕಾರಿಗಳು, ಯೋಗ ಶಿಕ್ಷಕರು, ಪಾಲಕರು ಹಾಗೂ ಸಾರ್ವಜನಿಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net