

ಬಾಗೂರು: ಹೋಬಳಿಯ ಬೀಚಗೊಂಡನಹಳ್ಳಿ ಗ್ರಾಮದಲ್ಲಿ ಆಯುಷ್ಮಾನ್ ಸ್ವಾಸ್ಥ್ಯ ಆರೋಗ್ಯ ಮಂದಿರ ನಿರ್ಮಾಣಕ್ಕೆ ಶಾಸಕ ಸಿ.ಎನ್.ಬಾಲಕೃಷ್ಣ ಭೂಮಿಪೂಜೆ ನೆರವೇರಿಸಿದರು.
ಗ್ರಾಮೀಣ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಸ್ಥಳೀಯವಾಗಿಯೇ ದೊರೆಯಬೇಕೆಂಬ ಉದ್ದೇಶದಿಂದ ಆರೋಗ್ಯ ಮಂದಿರ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಆಯುಷ್ಮಾನ್ ಭಾರತ್ಯೋಜನೆಯಡಿ ನಿರ್ಮಾಣಗೊಳ್ಳಲಿರುವ ನೂತನ ಆರೋಗ್ಯ ಮಂದಿರ ಬೀಚಗೊಂಡನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ. ಸಣ್ಣಪುಟ್ಟ ಕಾಯಿಲೆಗಳಿಗೆ ದೂರದ ಪಟ್ಟಣಗಳಿಗೆ ತೆರಳುವುದು ತಪ್ಪಲಿದ್ದು, ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆ ಹಾಗೂ ಆರೋಗ್ಯ ತಪಾಸಣೆ ಪಡೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಶಾಸಕ ಬಾಲಕೃಷ್ಣ ತಿಳಿಸಿದರು.
ತುರ್ತು ಸಂದರ್ಭ ಹಾಗೂ ರಾತ್ರಿ ವೇಳೆಯಲ್ಲಿ ಗ್ರಾಮೀಣ ಜನರಿಗೆ ವೈದ್ಯಕೀಯ ಸೇವೆ ಅಗತ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಜತೆಗೆ ಸಿಬ್ಬಂದಿಗೆ ವಸತಿಗೃಹ ನಿರ್ಮಿಸಲಾಗುತ್ತಿದ್ದು, ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಸ್ಥಳದಲ್ಲಿಯೇ ಲಭ್ಯವಿರಲು ಇದು ಸಹಕಾರಿಯಾಗಲಿದೆ ಎಂದು ಹೇಳಿದರು.
ಆರೋಗ್ಯ ಮಂದಿರದ ಕಟ್ಟಡವನ್ನು ಗುಣಮಟ್ಟದ ಕಾಮಗಾರಿಯೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಇಂಜಿನಿಯರ್ಗಳು ವಿಶೇಷ ಗಮನಹರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಯರಾಮ್, ಚಂದ್ರಣ್ಣ, ಧರ್ಮರಾಜ್, ಅನಿಲ್, ಮಲ್ಲೇಶ್, ಸತೀಶ್, ಮಂಜಣ್ಣ, ಬೋರೇಗೌಡ, ಸ್ವಾಮಿ, ರವಿ, ಶಿವಸ್ವಾಮಿ, ಗುತ್ತಿಗೆದಾರ ಅರುಣ್, ಯುವ ಮುಖಂಡ ಸಂಪತ್ಕುಮಾರ್ ಇತರರಿದ್ದರು.