

ಹಾಸನ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯಿಂದ ಉತ್ತರ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ವಿಶೇಷ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.
ರೆಡ್‌ಕ್ರಾಸ್ ಸಂಸ್ಥೆಯ ನಿರ್ದೇಶಕಿ ಡಾ.ರಂಗಲಕ್ಷ್ಮೀ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಓದಿನ ಜೊತೆಗೆ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಯಾವುದೇ ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣ ಪಾಲಕರು, ಶಿಕ್ಷಕರ ಗಮನಕ್ಕೆ ತರಬೇಕು ಎಂದು ತಿಳಿಸಿದರು.
ರೆಡ್‌ಕ್ರಾಸ್ ಸಂಸ್ಥೆಯ ನಿರ್ದೇಶಕಿ ಮಮತಾ ಪಾಟೀಲ್ ಮಾತನಾಡಿ, ಇಂದಿನ ಮಕ್ಕಳೇ ನಾಳಿನ ಉತ್ತಮ ಪ್ರಜೆಗಳು ಎಂಬ ಮಾತಿನಂತೆ ವಿದ್ಯಾರ್ಥಿಗಳು ಉತ್ತಮ ಗುಣಗಳನ್ನು ಬೆಳೆಸಿಕೊಂಡು ದೇಶದ ಜವಾಬ್ದಾರಿಯುತ ನಾಗರಿಕರಾಗಬೇಕು ಎಂದರು.
ಡಾ.ಅಗರ್ವಾಲ್ ಕಣ್ಣಿನ ಆಸ್ಪತ್ರೆಯ ವತಿಯಿಂದ ವಿದ್ಯಾರ್ಥಿಗಳಿಗೆ ನೇತ್ರ ತಪಾಸಣೆ ನಡೆಸಲಾಯಿತು. ರಸಪ್ರಶ್ನೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ ಎಚ್.ಬಿ.ಮಧು, ರೆಡ್‌ಕ್ರಾಸ್ ಸಂಸ್ಥೆಯ ನಿರ್ದೇಶಕರಾದ ಕೆ.ಟಿ.ಜಯಶ್ರೀ, ಭೀಮರಾಜ್, ಜಿಲ್ಲಾ ಸಂಯೋಜಕ ಅವಿನಾಶ್, ಮುಖ್ಯ ಶಿಕ್ಷಕಿ ಪದ್ಮಾ, ಶಿಕ್ಷಕರು ಉಪಸ್ಥಿತರಿದ್ದರು.