

ಹೊಳೆನರಸೀಪುರ: ಸರ್ಕಾರಿ ಶಾಲೆಗಳ ಸಬಲೀಕರಣ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ಎಂದು ಶಾಸಕ ಎಚ್.ಡಿ. ರೇವಣ್ಣ ಭರವಸೆ ನೀಡಿದರು.
ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಹೊಳೆನರಸೀಪುರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಶಿಕ್ಷಕರ ಭವನದಲ್ಲಿ ಶನಿವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರಿ ಶಾಲೆಗಳಿಗೆ ಸರ್ಕಾರ ಮೂಲ ಸೌಲಭ್ಯಗಳನ್ನು ಒದಗಿಸಬೇಕು. ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು ಎಂದು ಹೇಳಿದರು.
ಹೊಳೆನರಸೀಪುರ ಕ್ಷೇತ್ರದಲ್ಲಿ ಅತಿ ಹೆಚ್ಚು ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗಳು ಗುಣಮಟ್ಟದ ಕೆಲಸ ನಿರ್ವಹಿಸುತ್ತಿವೆ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ತರುತ್ತಿದ್ದಾರೆ. ಶಾಲಾ ಕೊಠಡಿಗಳ ದುರಸ್ತಿ ಹಾಗೂ ಮೂಲಸೌಕರ್ಯ ಕೊರತೆ ನೀಗಿಸಲು ಈಗಾಗಲೇ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಪಂಚಾಯಿತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದರು.
ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸಿ ಸಮಾಜಕ್ಕೆ ಕೊಡುಗೆಯಾಗಿ ನೀಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ. ದೇಶದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಶಿಕ್ಷಣ ಮತ್ತು ಶಿಕ್ಷಕರು ಅತಿ ಮುಖ್ಯ ಎಂದು ಶಾಸಕ ಎ. ಮಂಜು ಅಭಿಪ್ರಾಯಪಟ್ಟರು.
ಶಿಕ್ಷಕ ವೃತ್ತಿಗೆ ವಯಸ್ಸಿನ ಮಿತಿಯಿಂದ ನಿವೃತ್ತಿ ಇರಬಹುದು, ಆದರೆ ಅವರ ಜ್ಞಾನ ಮತ್ತು ಸೇವೆಗೆ ಸಮಾಜದಲ್ಲಿ ಎಂದಿಗೂ ನಿವೃತ್ತಿಯಿಲ್ಲ. ಪ್ರತಿಯೊಬ್ಬ ನಾಗರಿಕನ ಶ್ರೇಯಸ್ಸಿನ ಹಿಂದೆ ಗುರುವಿನ ಮಾರ್ಗದರ್ಶನವಿರುತ್ತದೆ ಎಂದು ಶಿಕ್ಷಕರ ಸೇವೆಯನ್ನು ಶ್ಲಾಘಿಸಿದರು.
ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳ ಪ್ರಗತಿಯ ಕುರಿತು ಶಿಸ್ತಿನ ಸಿಪಾಯಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶಿಕ್ಷಕರು ಯಾವುದೇ ಸ್ಥಾನವಿಲ್ಲದೆ ತಮ್ಮ ಸೇವೆ ಸಲ್ಲಿಸುತ್ತಿದ್ದಾರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಾಯ, ವಾಚ, ಮನಸ್ಸಿ ನಿಂದ ಶ್ರಮಿಸುತ್ತಿದ್ದಾರೆ. ಅವರಿಗೆ ಯಾವಾಗಲೂ ಸಹ ನನ್ನ ಸಹಕಾರ ಇದ್ದೇ ಇರುತ್ತದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದ ಸೋಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬೊಮ್ಮಯ್ಯ ನಾಯಕ್ ಅವರನ್ನು ಅಭಿನಂದಿಸಿ ಗೌರವಿಸಿದರು .
ಇದೇ ಸಂದರ್ಭದಲ್ಲಿ ಬೊಮ್ಮಯ್ಯ ನಾಯಕ್ ಅವರು ತಾಲೂಕಿನಲ್ಲಿ ಹೆಚ್ಚು ಅಂಕ ಪಡೆದ ಎಸ್ಎಸ್ಎಲ್ಸಿ ಮತ್ತು ಪಿಯು 20 ವಿದ್ಯಾರ್ಥಿಗಳಿಗೆ ತಲಾ ಒಂದು ಸಾವಿರ ರೂ. ನೀಡಿದರು.
ಸಮಾರಂಭದಲ್ಲಿ 40ಕ್ಕೂ ಹೆಚ್ಚು ನಿವೃತ್ತ ಶಿಕ್ಷಕರನ್ನು ಹಾಗೂ ಎಸ್ಎಸ್ಎಲ್ಸಿ, ಮತ್ತು ಪಿಯು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ತಹಸೀಲ್ದಾರ್ ರೇಣು ಕುಮಾರ್, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಮುನಿರಾಜ್,.ಶಿಕ್ಷಕರ ಸಂಘದ ಅಧ್ಯಕ್ಷ ಭೋಗೇಶ್, ಮಲ್ಲಾ ರಾಜೇಗೌಡ, ಈರಯ್ಯ, ಹಾಗೂ ಪದಾಧಿಕಾರಿಗಳು, ನೂರಾರು ಶಿಕ್ಷಕ-ಶಿಕ್ಷಕಿಯರು ಉಪಸ್ಥಿತರಿದ್ದರು.