

ಸಕಲೇಶಪುರ: ಕ್ಷೇತ್ರದ ಗ್ರಾಮೀಣ ಭಾಗದ ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಜನರ ಬಹುದಿನಗಳ ಬೇಡಿಕೆಗಳಿಗೆ ಸ್ಪಂದಿಸಿ ವಿವಿಧ ಯೋಜನೆಗಳಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ರಸ್ತೆ ಹಾಗೂ ಕಾಲುಸಂಕ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಹೆಗ್ಗದ್ದೆ ಮುಖ್ಯ ರಸ್ತೆಯಿಂದ ಕಾಡುಗದ್ದೆ ಗ್ರಾಮದವರೆಗೆ 1.32 ಕೋಟಿ ರೂ. ವೆಚ್ಚದಲ್ಲಿ ನೂತನ ರಸ್ತೆ ನಿರ್ಮಾಣವಾಗಲಿದೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಈ ರಸ್ತೆ ಅಭಿವೃದ್ಧಿಯ ನಿರೀಕ್ಷೆಯಲ್ಲಿದ್ದ ಗ್ರಾಮಸ್ಥರ ಬೇಡಿಕೆ ಇದೀಗ ಈಡೇರುತ್ತಿದೆ ಎಂದರು.
ಅದೇ ರೀತಿ ಕ್ಯಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಮಂಚಳ್ಳಿ ಗ್ರಾಮದಲ್ಲಿ 95 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿ ಹಾಗೂ ಬುಗಡಹಳ್ಳಿ ಗ್ರಾಮದಲ್ಲಿ 25 ಲಕ್ಷ ರೂ. ವೆಚ್ಚದ ಕಾಲುಸಂಕ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರಹಳ್ಳಿಯಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 5 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣವಾಗಲಿದೆ ಎಂದು ತಿಳಿಸಿದರು.
ರಸ್ತೆ ಅಭಿವೃದ್ಧಿಯು ಗ್ರಾಮಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪ್ರಗತಿಗೂ ಪೂರಕವಾಗಿದೆ. ಗುತ್ತಿಗೆದಾರರು ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಬೇಕು. ಸಾರ್ವಜನಿಕರೂ ಕಾಮಗಾರಿಗಳ ಗುಣಮಟ್ಟದ ಬಗ್ಗೆ ನಿಗಾ ವಹಿಸಬೇಕು ಎಂದು ಮನವಿ ಮಾಡಿದರು.
ಪಕ್ಷದ ಮುಖಂಡರಾದ ಮಧು ಬೊಮ್ಮನಕೆರೆ, ರೋಷನ್, ಹರಗರಹಳ್ಳಿ ಪುಟ್ಟಣ್ಣ, ಮಂಚಹಳ್ಳಿ ಮೋಹನ್, ಇಂದನ್, ತಿರುಮಲ, ಪ್ರತಾಪ್, ಪರಮೇಶ್, ಸುರೇಶ್, ಕಾರ್ತಿಕ್, ರೇಣುಕಾ, ಅನಿಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.