ದೇವಾಲಯಗಳು ಆಧ್ಯಾತ್ಮಿಕ ಮೌಲ್ಯಗಳ ಪ್ರತೀಕ

ಶ್ರೀ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ
ಶಿಖರ ಕಲಶಾರೋಹಣ ವಿಗ್ರಹ ಪ್ರತಿಷ್ಠಾಪನಾ ಸಮಾರಂಭ
ಆಲೂರು ತಾಲೂಕು ಬೊಮ್ಮಚವಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿ ನೂತನ ದೇವಾಲಯದ ವಿಗ್ರಹ ಪ್ರತಿಷ್ಠಾಪನೆ, ಶಿಖರ ಕಲಶಾರೋಹಣ ಕಾರ್ಯಕ್ರಮವನ್ನು ಶ್ರೀ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು. ಶಾಸಕ ಸಿಮೆಂಟ್ ಮಂಜು, ಶ್ರೀ ವಿಜಯಕುಮಾರ ಸ್ವಾಮೀಜಿ, ಹೊನ್ನವಳ್ಳಿ ಗಣೇಶ್, ಸಿದ್ದೇಶ್ ನಾಗೇಂದ್ರ ಇದ್ದರು.
Published on: 

ಆಲೂರು: ನೂತನ ದೇವಾಲಯಗಳ ನಿರ್ಮಾಣ, ಪುರಾತನ ದೇವಾಲಯಗಳ ಜೀರ್ಣೋದ್ಧಾರ ಕಾರ್ಯ ನಮ್ಮ ಭಕ್ತಿ, ನಂಬಿಕೆ ಹಾಗೂ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಶ್ಲಾಘನೀಯ ಕಾರ್ಯವಾಗಿದೆ ಎಂದು ಯಸಳೂರಿನ ತೆಂಕಲಗೂಡು ಬೃಹನ್ಮಠದ ಪೀಠಾಧ್ಯಕ್ಷರಾದ ಶ್ರೀ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲೂಕಿನ ಬೊಮ್ಮಚವಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿ ನೂತನ ದೇವಾಲಯದ ವಿಗ್ರಹ ಪ್ರತಿಷ್ಠಾಪನಾ ಸಮಾರಂಭ ಮತ್ತು ಶಿಖರ ಕಲಶಾರೋಹಣ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.

ದೇವಾಲಯಗಳು ಕೇವಲ ಕಲ್ಲಿನ ಕಟ್ಟಡಗಳಲ್ಲ. ಅವು ಭಾರತೀಯ ಸಂಸ್ಕೃತಿ ಮತ್ತು ಸನಾತನ ಧರ್ಮದ ಜೀವಂತ ಸಂಕೇತಗಳಾಗಿವೆ. ಗ್ರಾಮಸ್ಥರೆಲ್ಲರೂ ಒಟ್ಟಾಗಿ ಸೇರಿ ದೇವಸ್ಥಾನ ಜೀರ್ಣೋದ್ಧಾರ ಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಈ ದೇವಾಲಯವು ಹಿಂದೆ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರುಗಳಿಂದ ಪೂಜಿಸಲ್ಪಟ್ಟ ಪವಿತ್ರ ಕ್ಷೇತ್ರವಾಗಿದೆ ಎಂದರು.

ದೇವಾಲಯಗಳು ಕೇವಲ ಪೂಜಾ ಸ್ಥಳಗಳಲ್ಲ, ಅವು ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಆಧ್ಯಾತ್ಮಿಕ ಮೌಲ್ಯಗಳ ಪ್ರತೀಕಗಳಾಗಿವೆ. ಇಂತಹ ಪವಿತ್ರ ಕ್ಷೇತ್ರಗಳ ಅಭಿವೃದ್ಧಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು. ಧಾರ್ಮಿಕ ಕಾರ್ಯಗಳಿಗೆ ನೀಡುವ ದೇಣಿಗೆ ಅಥವಾ ಸೇವೆ ವ್ಯರ್ಥವಾಗುವುದಿಲ್ಲ. ದೇವರ ಕಾರ್ಯದಲ್ಲಿ ಕೈಜೋಡಿಸಿದವರಿಗೆ ದೇವರ ಆಶೀರ್ವಾದ ದೊರೆಯುವುದರೊಂದಿಗೆ ಜೀವನದಲ್ಲಿ ಶಾಂತಿ, ನೆಮ್ಮದಿ ಮತ್ತು ಪುಣ್ಯ ಲಭಿಸುತ್ತದೆ ಎಂದು ತಿಳಿಸಿದರು.

ಶಾಸಕ ಸಿಮೆಂಟ್ ಮಂಜು ಮಾತನಾಡಿ, ದೇವಸ್ಥಾನ ಜೀರ್ಣೋದ್ಧಾರ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಗ್ರಾಮಸ್ಥರು, ಭಕ್ತರು ಹಾಗೂ ದಾನಿಗಳು ಕೈಜೋಡಿಸಿರುವುದು ಶ್ಲಾಘನೀಯ. ಗ್ರಾಮಕ್ಕೆ ಅಗತ್ಯ ಮೂಲಸೌಕರ್ಯಗಳನ್ನೂ ಕಲ್ಪಿಸುವ ಮೂಲಕ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಹಾಸನದ ತಣ್ಣೀರು ಹಳ್ಳ ಮಠದ ಶ್ರೀ ವಿಜಯಕುಮಾರ ಸ್ವಾಮೀಜಿ, ಕಾಂಗ್ರೆಸ್ ಮುಖಂಡ ಹೊನ್ನವಳ್ಳಿ ಗಣೇಶ್, ಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಎಚ್.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಕಬ್ಬಿನಹಳ್ಳಿ ಜಗದೀಶ್, ಕೆ.ಎಸ್.ಮಂಜೇಗೌಡ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ರಂಗೇಗೌಡ, ಹಂಚೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪುಷ್ಪಾ ಚಂದ್ರಶೇಖರ್, ಉಪಾಧ್ಯಕ್ಷ ಷಣ್ಮುಖ, ಆಲೂರು ತಾಲೂಕು ವೀರಶೈವ ಲಿಂಗಾಯತ ಸಂಘದ ಅಧ್ಯಕ್ಷ ರೇಣುಕ ಪ್ರಸಾದ್, ಉಪಾಧ್ಯಕ್ಷ ಡಿ.ಎಸ್.ಜಯಣ್ಣ, ಸಹ ಕಾರ್ಯದರ್ಶಿ ಡಾ.ಜಯರಾಜ್, ಖಜಾಂಚಿ ಟೀಕರಾಜು, ಕಾಂಗ್ರೆಸ್ ಮುಖಂಡ ಶಾಂತಪ್ಪ ಹಾಜರಿದ್ದರು.