

ಚನ್ನರಾಯಪಟ್ಟಣ: ಮಧುಮೇಹವನ್ನು ನಿರ್ಲಕ್ಷಿಸಿದರೆ ಕಿಡ್ನಿ ವೈಫಲ್ಯ, ಹೃದಯ ಕಾಯಿಲೆ, ನರಗಳ ಹಾನಿ ಹಾಗೂ ಗ್ಯಾಂಗ್ರಿನ್ನಂತಹ ಗಂಭೀರ ಸಮಸ್ಯೆಗಳು ಎದುರಾಗಬಹುದು. ಆದ್ದರಿಂದ ಆರಂಭಿಕ ಹಂತದಲ್ಲಿಯೇ ರೋಗ ಪತ್ತೆಹಚ್ಚಿ ನಿಯಂತ್ರಣಕ್ಕೆ ತರುವುದರ ಜತೆಗೆ ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವುದು ಅತ್ಯಗತ್ಯ ಎಂದು ನಾಗೇಶ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಕೆ.ನಾಗೇಶ್ ತಿಳಿಸಿದರು.
ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನಾಗೇಶ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಬೃಹತ್ ಜನಜಾಗೃತಿ ಜಾಥಾದಲ್ಲಿ ಮಾತನಾಡಿದ ಅವರು, ಭಾರತದಲ್ಲಿ 10.1ಕೋಟಿ ಮಂದಿ ಮಧುಮೇಹದಿಂದ ಹಾಗೂ 13.6 ಕೋಟಿ ಮಂದಿ ಮಧುಮೇಹ ಪೂರ್ವ ಸ್ಥಿತಿಯಿಂದ ಬಳಲುತ್ತಿದ್ದಾರೆ. ಒಟ್ಟಾರೆ 23.7 ಕೋಟಿ ಜನರು ಮಧುಮೇಹದ ಅಪಾಯ ಎದುರಿಸುತ್ತಿರುವುದು ಆತಂಕಕಾರಿ ಸಂಗತಿ ಎಂದರು.
ಈ ವರ್ಷದ ‘ಮಧುಮೇಹದ ವಿರುದ್ಧ ಆರಂಭಿಕ ಕ್ರಮ’ ಘೋಷವಾಕ್ಯದಂತೆ ರೋಗದ ಲಕ್ಷಣಗಳನ್ನು ಆರಂಭದಲ್ಲಿಯೇ ಗುರುತಿಸಿ ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆ ಪಡೆಯಬೇಕು. ಸಮತೋಲಿತ ಆಹಾರ ಸೇವನೆ, ಸಕ್ಕರೆ ಮತ್ತು ಕೊಬ್ಬಿನ ಅಂಶ ಹೆಚ್ಚಿರುವ ಆಹಾರದಿಂದ ದೂರವಿರುವುದು, ನಿಯಮಿತ ವ್ಯಾಯಾಮ ಹಾಗೂ ದೇಹದ ತೂಕದ ನಿಯಂತ್ರಣದಿಂದ ಟೈಪ್-2 ಮಧುಮೇಹದ ಅಪಾಯವನ್ನು ಕಡಿಮೆ ಮಾಡಬಹುದು. ಮಧುಮೇಹದ ಅಪಾಯ ಇರುವವರು ವೈದ್ಯರ ಸಲಹೆಯಂತೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹಾಗೂ ಎಚ್ಬಿಎ1ಸಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಬಿ.ಆರ್.ಯುವರಾಜ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಸಕ್ಕರೆ ಕಾಯಿಲೆ ಸೇರಿದಂತೆ ವಿವಿಧ ರೋಗಗಳ ಆರಂಭಿಕ ಪತ್ತೆಗೆ ಸರ್ಕಾರದ ಎನ್ಸಿಟಿ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.
ಈ ಕಾರ್ಯಕ್ರಮದಡಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಮಧುಮೇಹ, ರಕ್ತದೊತ್ತಡ ಹಾಗೂ ಕ್ಯಾನ್ಸರ್ ಸೇರಿದಂತೆ ಸಾಂಕ್ರಾಮಿಕವಲ್ಲದ ಕಾಯಿಲೆಗಳ ತಪಾಸಣೆ ನಡೆಸುತ್ತಿದ್ದಾರೆ. ರೋಗದ ಲಕ್ಷಣಗಳು, ಅಪಾಯದ ಅಂಶಗಳು, ಆಹಾರ ಪದ್ಧತಿ ಮತ್ತು ವ್ಯಾಯಾಮದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದ್ದಾರೆ. ತಪಾಸಣೆಯಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಿರುವುದು ಕಂಡುಬಂದರೆ ಹೆಚ್ಚಿನ ಪರೀಕ್ಷೆ ಹಾಗೂ ಚಿಕಿತ್ಸೆಗಾಗಿ ಆರೋಗ್ಯ ಕೇಂದ್ರಗಳಿಗೆ ಕಳುಹಿಸಲಾಗುತ್ತದೆ. ಸಾರ್ವಜನಿಕರು ಆರೋಗ್ಯ ಕಾರ್ಯಕರ್ತರೊಂದಿಗೆ ಸಹಕರಿಸಿ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಪೊಲೀಸ್ ಇಲಾಖೆ ಸಿಬ್ಬಂದಿ, ಕ್ಯಾಬ್ ಚಾಲಕರು ಹಾಗೂ ಆಟೋ ಚಾಲಕರಿಗೆ ರಕ್ತದಲ್ಲಿನ ಸಕ್ಕರೆ ಪ್ರಮಾಣದ ಉಚಿತ ತಪಾಸಣೆ ನಡೆಸಲಾಯಿತು. ಒಟ್ಟು 430 ಮಂದಿಯನ್ನು ಪರೀಕ್ಷೆಗೊಳಪಡಿಸಿದ್ದು, ಅವರಲ್ಲಿ 34 ಮಂದಿಯಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಿರುವುದು ಪತ್ತೆಯಾಗಿದೆ. ಈ ಮೂಲಕ ಮಧುಮೇಹದ ಅಪಾಯವನ್ನು ಆರಂಭಿಕ ಹಂತದಲ್ಲಿಯೇ ಗುರುತಿಸುವ ಹಾಗೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮಹತ್ವವನ್ನು ಕಾರ್ಯಕ್ರಮವು ಸಾರಿತು. ಪತ್ತೆಯಾದವರಿಗೆ ಹೆಚ್ಚಿನ ವೈದ್ಯಕೀಯ ತಪಾಸಣೆ ಮತ್ತು ವೈದ್ಯರ ಸಲಹೆ ಪಡೆಯುವಂತೆ ಸೂಚಿಸಲಾಯಿತು.
ಜಾಥಾ ಕಾರ್ಯಕ್ರಮದಲ್ಲಿ ನಾಗೇಶ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಡಾ.ಭಾರತಿ ನಾಗೇಶ್ ಡೀನ್ ಸುಜಾಪಿಲಿಪ್, ಆಡಳಿತ ಅಧಿಕಾರಿ ಪಿಲಿಪ್, ಡಾ.ಪ್ರಥಮ್ ನಾಗೇಶ್, ಡಾ. ಡಿಂಪಲ್, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.