ಸಂಘಟಿತರಾಗಿ ಮಹಿಳೆಯರು ಪ್ರಗತಿ ಸಾಧಿಸಿ

ವಿಠಲ್ ಸಾಲಿಯಾನ್ ಸಲಹೆ
ಅರಕಲಗೂಡಿನಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮದಲ್ಲಿ ಮಹಿಳೆಯರು ಪೂಜೆ ಸಲ್ಲಿಸಿದರು.
ಅರಕಲಗೂಡಿನಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮದಲ್ಲಿ ಮಹಿಳೆಯರು ಪೂಜೆ ಸಲ್ಲಿಸಿದರು.
Published on: 

ಅರಕಲಗೂಡು: ಮಹಿಳೆಯರು ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಂಘಟಿತರಾಗಿ ಏಳಿಗೆ ಕಾಣಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಿಠಲ್ ಸಾಲಿಯಾನ್ ಹೇಳಿದರು.

ಪಟ್ಟಣದ ಶಿವದೇವ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕುಟುಂಬಗಳಲ್ಲಿ ಹಾಗೂ ಸಮಾಜದಲ್ಲಿ ಧಾರ್ಮಿಕ ಭಾವನೆಗಳನ್ನು ಬೆಳೆಸಲು ಸಂಸ್ಥೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಮಹಿಳೆಯರು ಮನೆ ಕಾರ್ಯಗಳನ್ನು ನಿರ್ವಹಿಸುವ ಜತೆಗೆ ಇಂತಹ ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಯಲ್ಲಿ ಭಾಗವಹಿಸಿ ಸಂಘಟಿತರಾಗಬೇಕು. ಸಂಘಟನೆ ಮೂಲಕ ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದರು.

ಚಿಲುಮೆ ಮಠದ ಶ್ರೀ ಜಯದೇವ ಸ್ವಾಮೀಜಿ ಮಾತನಾಡಿ, ಧಾರ್ಮಿಕ ಆಚರಣೆಗಳು ಕುಟುಂಬದಲ್ಲಿ ಶಾಂತಿ, ನೆಮ್ಮದಿ ಹಾಗೂ ಸೌಹಾರ್ದತೆ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಮಹಿಳೆಯರು ಭಕ್ತಿ, ಸಂಸ್ಕಾರ ಮತ್ತು ಧಾರ್ಮಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.

ಸಾಮೂಹಿಕ ವರಮಹಾಲಕ್ಷ್ಮೀ ಪೂಜೆಯಲ್ಲಿ ಮಹಿಳೆಯರು ಭಕ್ತಿಭಾವದಿಂದ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಕಾರ್ಯಕ್ರಮ ಅಂಗವಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.

ಕಾರ್ಯಕ್ರಮದಲ್ಲಿ ಸುಜಾತಾ, ಶಾಂತಮಲ್ಲಪ್ಪ, ಗೌತಮಿ, ಹೂವಣ್ಣ, ವಿಠಲ್, ಲೋಕೇಶ್, ಸ್ವಾತಿ, ಗುಪ್ತ, ಪ್ರಕಾಶ್, ನಂದಿನಿ, ಸೌಮ್ಯಾ, ಚೈತ್ರಾ, ಗೌರಮ್ಮ, ಉಮಾದೇವಿ, ರೂಪಾ, ಪುಟ್ಟಲಕ್ಷ್ಮೀ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net