

ಹಾಸನ: ಅಧಿಕಾರಿಗಳಿಗೆ ವಹಿಸುವ ಕರ್ತವ್ಯವನ್ನು ಅಚ್ಚುಕಟ್ಟಾಗಿ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸುವ ಮೂಲಕ ಹಾಸನಾಂಬ ಜಾತ್ರಾ ಮಹೋತ್ಸವನ್ನು ಯಶಸ್ವಿಗೊಳಿಸಬೇಕು ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಸೂಚಿಸಿದರು.
ಹಾಸನಾಂಬ ದೇವಿ ದರ್ಶನ ಹಾಗೂ ಶ್ರೀಸಿದ್ದೇಶ್ವರ ಜಾತ್ರಾ ಮಹೋತ್ಸವ ಕುರಿತು ಇಲ್ಲಿನ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಉದಾಸೀನ ಮಾಡದೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ಹಾಸನಾಂಬ ಜಾತ್ರಾ ಮಹೋತ್ಸವ ಜಿಲ್ಲೆಯ ಗೌರವದ ಪ್ರತೀಕ. ರಾಜ್ಯದ ಮೂಲೆ ಮೂಲೆಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸುವುದರಿಂದ ಪ್ರತಿಯೊಬ್ಬರೂ ಅತ್ಯುತ್ತಮವಾಗಿ ನಿರ್ವಹಣೆ ಮಾಡುವ ಮೂಲಕ ಜಿಲ್ಲೆಗೆ ಉತ್ತಮ ಹೆಸರು ತರುವಂತೆ ನಡೆದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲೆಯ ಜನತೆಯೂ ತಮ್ಮ ಸೌಭಾಗ್ಯ ಎಂದು ತಿಳಿದುಕೊಂಡು ಅತ್ಯಂತ ಸಂತೋಷ, ಸಂಭ್ರಮದಿಂದ ತೆರದ ಮನಸ್ಸಿನಿಂದ ಭಕ್ತರನ್ನು ಸ್ವಾಗತ ಮಾಡಬೇಕು ಎಂದು ಮನವಿ ಮಾಡಿದರಲ್ಲದೆ, ಜನಪ್ರತಿನಿಧಿಗಳು ಸಹಕಾರ ನೀಡುವ ಮೂಲಕ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದರು.
ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ಲ್ಲರೂ ಗೌರವಯುತವಾಗಿ ನಡೆದುಕೊಳ್ಳಬೇಕು ಈ ನಿಟ್ಟಿನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳ ಸಹಕಾರ ಅಗತ್ಯ ಎಂದು ಸಚಿವರು ತಿಳಿಸಿದರು.
ಅ.9ರಂದು ದೇವಾಲಯದ ಬಾಗಿಲು ತೆರೆಯಲಿದ್ದು, 23ರಂದು ಬಾಗಿಲು ಮುಚ್ಚಲ್ಪಡುತ್ತದೆ. ಒಟ್ಟು 13 ದಿನಗಳ ಕಾಲ ದೇವಿ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದರು.
ಭಕ್ತರಿಗೆ ಕುಡಿಯುವ ನೀರು, ಶೌಚಗೃಹ, ಪಾರ್ಕಿಂಗ್ ವ್ಯವಸ್ಥೆ, ಪ್ರಸಾದ ವಿತರಣೆ, ದೇವಿ ದರ್ಶನಕ್ಕೆ ಸರತಿ ಸಾಲಿನಲ್ಲಿ ಸಾಗಲು ಅನುಕೂಲವಾಗುವಂತೆ ಬ್ಯಾರಿಕೇಡ್ ವ್ಯವಸ್ಥೆ ಮಾಡಬೇಕು. ಅಲ್ಲದೆ ಜನಸಂದಣಿ ಆಗದಂತೆ ಎಚ್ಚರಿಕೆವಹಿಸಿ ಶಾಂತ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.
ದೇವಿ ದರ್ಶನಕ್ಕೆ ಆಗಮಿಸುವ ಸಾರ್ವಜನಿಕರಿಗೆ ಜಾತ್ರಾ ಮಹೋತ್ಸವ ಮನಸ್ಸಿನಲ್ಲಿ ಉಳಿಯುವಂತೆ ಮಾಡಲು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಜತೆಗೆ ಜಾನಪದ ಕಲಾ ಪ್ರರ್ದಶನಕ್ಕೆ ಒತ್ತು ನೀಡಬೇಕು. ಸ್ಥಳೀಯ ತಿಂಡಿ ತಿನಿಸು ಹಾಗೂ ಕರಕುಶಲ ಉತ್ಪನ್ನಗಳಿಗೆ ಮಾರಾಟ ಮಳಿಗೆಗಳನ್ನು ತೆರೆಯಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಯುವ ಜನತೆಯಲ್ಲಿರುವ ಕಲಾ ಪ್ರತಿಭೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಿ ಸದಾಭಿರುಚಿಯಿಂದ ಕೂಡಿರುವ ನೃತ್ಯಗಳನ್ನು ಪ್ರರ್ದಶಿಲು ಅವಕಾಶ ಕಲ್ಪಿಸಿ ಉತ್ತಮ ಪ್ರದರ್ಶನಕ್ಕೆ ಬಹುಮಾನ ನೀಡಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರೂ ಆದ ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಕಳೆದ ಬಾರಿ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅತ್ಯಂತ ಅಚ್ಚುಕಟ್ಟಾಗಿ ನಡೆದಿತ್ತು. ಅದೇ ರೀತಿ ಈ ಬಾರಿಯೂ ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಶಾಸಕ ಸ್ವರೂಪ್ ಪ್ರಕಾಶ್ ಮಾತನಾಡಿ, ನಗರಸಭೆ ಸದಸ್ಯರು ಮತ್ತು ಪೌರಕಾರ್ಮಿಕರಿಗೆ ನಿಗದಿತ ಸಮಯದಲ್ಲಿ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಕೋರಿದರಲ್ಲದೆ, ಜಾತ್ರಾ ಸಂಭ್ರಮದಲ್ಲಿ ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್ ದೀಪಗಳ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಲತಾ ಕುಮಾರಿ ಮಾತನಾಡಿ, ಜಾತ್ರಾ ಮಹೋತ್ಸವದಲ್ಲಿ ಕರ್ತವ್ಯ ನಿರ್ವಹಿಸಲು ಈಗಾಗಲೇ ವಿವಿಧ ತಂಡಗಳನ್ನು ರಚಿಸಲಾಗಿದೆ. ಜನಸಂದಣಿ ನಿಯಂತ್ರಣ ಹಾಗೂ ಸುರಕ್ಷತೆಗಾಗಿ ಕ್ರಮವಹಿಸಲಾಗುತ್ತಿದೆ ಎಂದು ಸಭೆಯ ಗಮನಕ್ಕೆ ತಂದರು.
ಜಾತ್ರಾ ಮಹೋತ್ರವಕ್ಕೆ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಹಾಸನಾಂಬ ದೇವಾಲಯದ ಆಡಳಿತಾಧಿಕಾರಿ ಹಾಗೂ ಹಾಸನ ಉಪ ವಿಭಾಗಧಿಕಾರಿ ಮಾರುತಿ ಸಭೆಗೆ ಮಾಹಿತಿ ನೀಡಿದರು.
ಸಂಸದ ಶ್ರೇಯಸ್ ಪಟೇಲ್, ಶಾಸಕ ಸಿಮೆಂಟ್ ಮಂಜು, ಮೇಯರ್ ಹೇಮಾಲತಾ, ಜಿಲ್ಲಾ ಪಂಚಾಯಿತಿ ಸಿಇಒ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.