

ಹಾವೇರಿ: ಮುಂಬರುವ ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಬುಧವಾರ ವಿ.ಎಸ್.ಟಿ. ಹಾಗೂ ಎಫ್.ಎಸ್.ಟಿ. ತಂಡಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 45 ದಿನಗಳ ಕಾಲ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲಿ ಜಿಲ್ಲಾಧಿಕಾರಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮಾರ್ಗದರ್ಶನದಲ್ಲಿ ಸುಮಾರು ಏಳರಿಂದ ಎಂಟು ಸಾವಿರ ಅಧಿಕಾರಿ ಮತ್ತು ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ವಿವಿಧ ತಂಡಗಳಿಗೆ ನಿಯೋಜಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ತಮಗೆ ತಿಳಿಯದ ವಿಷಯವನ್ನು ಕೇಳಿ ತಿಳಿದುಕೊಂಡು ಅತ್ಯಂತ ಜಾಗರೂಕತೆಯಿಂದ ಹಾಗೂ ಆಸಕ್ತಿಯಿಂದ ಕಾರ್ಯನಿರ್ವಹಿಸುವ ಮೂಲಕ ಯಶಸ್ವಿ ಚುನಾವಣೆ ನಡೆಸುವ ಮೂಲಕ ಜಿಲ್ಲಾಡಳಿತಕ್ಕೆ ಒಳ್ಳೆಯ ಹೆಸರು ತರಬೇಕು ಎಂದು ಸಲಹೆ ನೀಡಿದರು.
ಕುಣಿಮೆಳ್ಳಿಹಳ್ಳಿ ಸರ್ಕಾರಿ ಪ.ಪೂ.ಕಾಲೇಜ್ ಉಪನ್ಯಾಸಕ ಅರವಿಂದ ಐರಣಿ ಅವರು ವಿ.ಎಸ್.ಟಿ. ಹಾಗೂ ಎಫ್.ಎಸ್.ಟಿ. ತಂಡಗಳ ಕಾರ್ಯನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.
ಜಿ.ಪಂ.ಮುಖ್ಯ ಲೆಕ್ಕಾಧಿಕಾರಿ ವಸಂತಕುಮಾರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಎಚ್.ಉಮೇಶಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಜಿಲ್ಲಾ ಯೋಜನಾಧಿಕಾರಿ ಮಮತಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಇತರರು ಉಪಸ್ಥಿತರಿದ್ದರು.