ಸಿಸಿಟಿವಿ ಕಣ್ಗಾವಲಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ

18 HVR 5
Published on

ಹಾವೇರಿ: ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ಆ.21ರಿಂದ ಸೆಪ್ಟೆಂಬರ್ 2ರವರೆಗೆ ಜಿಲ್ಲೆಯ ಏಳು ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ. ನಕಲು ಮುಕ್ತ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು. ಪ್ರಶ್ನೆಪತ್ರಿಕೆ ಬಂಡಲ್ ತೆರೆಯುವಾಗ ಹಾಗೂ ಉತ್ತರ ಪತ್ರಿಕೆಗಳ ಬಂಡಲ್‌ಗಳನ್ನು ಸೀಲ್ ಮಾಡುವಾಗ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮರಾ ಕಣ್ಗಾವಲಿನಲ್ಲಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿ ಮತ್ತು ಸಿಬ್ಬಂದಿ ನಿಗದಿತ ಸಮಯಕ್ಕೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು. ಪ್ರಶ್ನೆ ಪತ್ರಿಕೆ ಸಂಗ್ರಹಣೆ ಹಾಗೂ ರವಾನೆ ಬಹಳ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕು. ಪರೀಕ್ಷಾ ಕರ್ತವ್ಯದಲ್ಲಿ ಯಾವುದೇ ಲೋಪವಾಗದಂತೆ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.
ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆ, ಇ-ಕ್ಯಾಮರಾ, ಲ್ಯಾಪ್‌ಟಾಪ್ ಇತ್ಯಾದಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಈ ಪ್ರದೇಶದಲ್ಲಿನ ಝರಾಕ್ಸ್ ಸೆಂಟರ್ ಹಾಗೂ ಟೈಪಿಂಗ್ ಸೆಂಟರ್ ಮುಚ್ಚಲು ಆದೇಶಿಸಲಾಗಿದೆ ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರು ಹಾಗೂ ಬಂದ್ತೋಬಸ್ತ್‌ಗೆ ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಎಚ್ ಉಮೇಶಪ್ಪ ಮಾತನಾಡಿ, ಜಿಲ್ಲೆಯಲ್ಲಿ 3,955 ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಕೊಠಡಿ ಮೇಲ್ವಿಚಾರಕರನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು. ಸುವ್ಯವಸ್ಥಿತ ಪರೀಕ್ಷೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ಡಿವೈಎಸ್‌ಪಿ ಎಂ.ಎಸ್ ಪಾಟೀಲ, ವಿವಿಧ ತಾಲೂಕುಗಳ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net