

ಹಾವೇರಿ: ಶಿಗ್ಗಾಂವಿ, ಸವಣೂರ ಹಾಗೂ ಬಂಕಾಪುರ ಪಟ್ಟಣಗಳ ಕುಡಿಯುವ ನೀರು ಪೂರೈಕೆ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ 351 ಕೋಟಿ ರೂ. ಯೋಜನೆಗೆ ಅನುಮೋದನೆ ನೀಡಿದೆ. ಈ ಮೂಲಕ ಶಿಗ್ಗಾಂವಿ- ಸವಣೂರ ಉಪಚುನಾವಣೆ ವೇಳೆ ರಾಜ್ಯ ಸರ್ಕಾರ ನೀಡಿದ್ದ ಭರವಸೆಯನ್ನು ಈಡೇರಿಸಿದೆ ಎಂದು ಹೆಸ್ಕಾಂ ಅಧ್ಯಕ್ಷ ಅಜೀಮ್‌ಪೀರ್ ಖಾದ್ರಿ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಉಪಚುನಾವಣೆಯಲ್ಲಿ ಸ್ಥಳೀಯ ಪ್ರಮುಖ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಸಂಪುಟ ಸಭೆಯಲ್ಲಿ ಯೋಜನೆಗೆ ಅನುಮೋದನೆ ನೀಡುವ ಮೂಲಕ ನಮ್ಮ ಸರ್ಕಾರ ನಡೆದುಕೊಂಡಿದೆ ಎಂದು ಖಾದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.