ಬಾಲ್ಯ ವಿವಾಹ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ; ಬಸವ ಜಯಂತಿಯಂದು ನಿಗಾ ವಹಿಸಲು ನಿರ್ದೇಶನ

DC Vijaya Mahantesh Danammanavar
Published on

ಹಾವೇರಿ: ಏ.30ರಂದು ಬಸವ ಜಯಂತಿ ಹಾಗೂ ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಆಯೋಜಿಸಿರುವ ಸಾಮೂಹಿಕ ವಿವಾಹಗಳಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಗಳಿದ್ದು, ಬಾಲ್ಯವಿವಾಹ ನಿಷೇಧಾಧಿಕಾರಿಗಳು ಬ್ಯಾಲ್ಯವಿವಾಹ ತಡೆಗೆ ಅಗತ್ಯ ಮುಂಜಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದ್ದಾರೆ.

ಬಾಲ್ಯವಿವಾಹ ನಿಷೇಧಾಧಿಕಾರಿಗಳು ಬಾಲ್ಯವಿವಾಹಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಲಯ, ಗ್ರಾಮ, ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಕಡ್ಡಾಯವಾಗಿ ತಮ್ಮ ವ್ಯಾಪ್ತಿಗಳಲ್ಲಿ ನಡೆಯುವ ಸಾಮೂಹಿಕ ಮತ್ತು ವೈಯಕ್ತಿಕವಾಗಿ ಯಾವುದೇ ಬಾಲ್ಯವಿವಾಹ ನಡೆಯದಂತೆ ನಿಯಮಾನುಸಾರ ಕಾರ್ಯ ಪ್ರವೃತ್ತರಾಗಬೇಕು. ಈ ಕೂಡಲೇ ಎಲ್ಲೆಲ್ಲಿ ವಿವಾಹ ಕಾರ್ಯಕ್ರಮಗಳಿವೆಯೋ ಅಂತಹ ಕಡೆ ತೆರಳಿ ವಧು, ವರರ ವಯಸ್ಸಿನ ಮಾಹಿತಿ ಕಲೆ ಹಾಕಬೇಕು ಎಂದು ತಿಳಿಸಿದ್ದಾರೆ.

ಮಕ್ಕಳ ಮೇಲಾಗುವ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕುರಿತು ಈಗಾಗಲೇ ಸಾಕಷ್ಟು ಅರಿವು ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದ್ದರೂ ಸಹ, ಇಲಾಖೆಗಳ ಗಮನಕ್ಕೆ ಬಾರದೇ, ಗೊತ್ತಿಲ್ಲದೆಯೇ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಿವಾಹ ಮಾಡುತ್ತಿರುವುದು ಕಂಡು ಬರುತ್ತಿದೆ. ಆದ್ದರಿಂದ ಜಿಲ್ಲೆಯ ಎಲ್ಲ ವಲಯ, ಗ್ರಾಮ, ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿರುವ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖಾಧಿಕಾರಿಗಳು ಜಾಗೃತಿ ಕಾರ್ಯಕ್ರಮಗಳ ಮುಖಾಂತರ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಡಿಸಿ ನಿರ್ದೇಶನ ನೀಡಿದ್ದಾರೆ.

ಸಹಾಯವಾಣಿ 1098/112:

ಸಾಮೂಹಿಕ ವಿವಾಹ ಆಯೋಜಕರಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವ ಜತೆಗೆ ಹಾವೇರಿ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾಡಲು ಶ್ರಮಿಸಬೇಕು. ಸಾರ್ವಜನಿಕರಿಗೆ ಬಾಲ್ಯವಿವಾಹ ನಡೆಯುವ ಮಾಹಿತಿ ಕಂಡುಬಂದಲ್ಲಿ 1098/ 112ಗೆ ಕರೆಮಾಡಿ ಮಾಹಿತಿ ನೀಡುವ ಮೂಲಕ ಬಾಲ್ಯವಿವಾಹಗಳನ್ನು ತಡೆಗಟ್ಟಲು ಸಹಕರಿಸುವಂತೆ ಡಿಸಿ ಮನವಿ ಮಾಡಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net