

ಹಾವೇರಿ: ರಾಜ್ಯದಲ್ಲಿ ಜನರ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತಿದೆ. ರಾಜ್ಯ ಸರ್ಕಾರದ ದುರಾಡಳಿತ ನೋಡಿದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕಿದೆ. ಎಲ್ಲರೂ ಸಂಘಟಿತರಾಗಿ ಕೆಲಸ ಮಾಡಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಬಿಜೆಪಿ ಮುಖಂಡರು, ಕಾರ್ಯಕರ್ತರಿಗೆ ಕರೆ ನೀಡಿದರು.
ನಗರದ ಕಾಗಿನೆಲೆ ರಸ್ತೆಯ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಪ್ರಮುಖರು, ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಬಿಜೆಪಿಯನ್ನು ಪ್ರಭಲವಾಗಿ ಕಟ್ಟಬೇಕೆಂದು ತೀರ್ಮಾನಿಸಿದ್ದೇವೆ. ಜಿಲ್ಲೆಯ ಜನಸಾಗರವೇ ಬಿಜೆಪಿ ಜೆತೆಗೆ ಬರಬೇಕು. ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರ ಮಿತಿಮೀರಿ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಜನರ ಪರವಾಗಿ ಹೋರಾಟ ಮಾಡಿದರೆ ಜನರು ನಮ್ಮ ಜತೆಗೆ ನಿಲ್ಲುತ್ತಾರೆ. ಜನ ಕೇವಲ ಆಡಳಿತ ಪಕ್ಷಕ್ಕಷ್ಟೇ ಅಲ್ಲ. ವಿರೋಧ ಪಕ್ಷವನ್ನೂ ಪ್ರಶ್ನಿಸುತ್ತಾರೆ. ನಮ್ಮನ್ನೂ ಬಹಳ ಎಚ್ಚರಿಕೆಯಿಂದ ನೋಡುತ್ತಾರೆ. ಹೀಗಾಗಿ, ನಾವು ಸಂಘಟಿತರಾಗಬೇಕು. ನಾನೂ ಹೆಚ್ಚಿನ ಸಮಯ ನೀಡಿ ಎಲ್ಲ ತಾಲೂಕುಗಳಿಗೆ ಬರುತ್ತೇನೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಶಹರ ಮಂಡಲ ಅಧ್ಯಕ್ಷ ಗಿರೀಶ ತುಪ್ಪದ, ಪ್ರಮುಖರಾದ ಮಂಜುನಾಥ ಓಲೇಕಾರ, ಭಾರತಿ ಜಂಬಗಿ, ಸಂತೋಷಕುಮಾರ ಪಾಟೀಲ, ಲಿಂಗರಾಜ ಚಪ್ಪರದಹಳ್ಳಿ, ಇತರರಿದ್ದರು.
ಜಿಪಂ, ತಾಪಂ ಗೆಲ್ಲುವ ಗುರಿ
ನಮ್ಮ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಸಾಧನೆಯನ್ನು ಇಟ್ಟುಕೊಂಡು ವಿರೋಧ ಪಕ್ಷಗಳಿಗೆ ತಕ್ಕ ಉತ್ತರ ಕೊಡಿ. ಯಾರಾದರೂ ಕೇಂದ್ರದ ವಿರುದ್ಧ ಮಾತನಾಡಿದರೆ ಅವರಿಗೆ ತಕ್ಕ ಉತ್ತರ ಕೊಡಿ. ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ 8 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬೇಕೆನ್ನುವುದು ನನ್ನ ಸಂಕಲ್ಪ ಮತ್ತು ಗುರಿ ಎಂದು ಬೊಮ್ಮಾಯಿ ಹೇಳಿದರು.