

ಹಾವೇರಿ: ರಾಜ್ಯದಲ್ಲಿ ಕಾನೂನುನ ಸುವ್ಯವಸ್ಥೆ ಹದಗೆಟ್ಟಿದ್ದು, ಮಹಿಳೆಯರು ಮತ್ತು ಮಕ್ಕಳ ಮೇಲೆ ಹಲ್ಲೆ, ಹತ್ಯೆ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹೀಗಿದ್ದರೂ, ಮಹಿಳಾ ಮತ್ತು ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹಿಳೆಯರು, ಮಕ್ಕಳ ಮೇಲಿನ ಕಾಳಜಿ ಮರೆತು ರಾಜಕೀಯದಲ್ಲಿ ನಿರತರಾಗಿದ್ದಾರೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ ವಾಗ್ದಾಳಿ ನಡೆಸಿದರು. ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಮಾಸೂರನಲ್ಲಿ ಸ್ವಾತಿ ಹತ್ಯೆ, ಸೇರಿದಂತೆ ಅನೇಕ ಪ್ರಕರಣಗಳು ನಡೆದರೂ ಸಚಿವೆ ಹೆಬ್ಬಾಳ್ಕರ್ ಒಮ್ಮೆಯೂ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿಲ್ಲ. ಮಹಿಳೆಯರು ಮತ್ತು ಮಕ್ಕಳ ಬಗ್ಗೆ ಕಾಳಜಿ ಇಲ್ಲದ ಸಚಿವೆ ಅವರು ಎಂದರು. ಪ್ರೀತಿ ಪ್ರೇಮದ ಹೆಸರಲ್ಲಿ ಹುಬ್ಬಳ್ಳಿಯ ನೇಹಾ ಹಿರೇಮಠ, ಅಂಜಲಿ ಹತ್ಯೆ ನಡೆದಿವೆ. ಅತ್ಯಾಚಾರಗಳು ನಡೆಯುತ್ತಿವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಜಿಲ್ಲೆಯಲ್ಲಿ ಸರಗಳ್ಳತನ, ಹಾನಗಲ್ಲ ಭಾಗದಲ್ಲಿ ಪದೇಪದೆ ಅತ್ಯಾಚಾರಗಳು ವರದಿಯಾಗುತ್ತಿವೆ. ಜಿಲ್ಲೆಯಲ್ಲಿ ನಡೆಯುತ್ತಿರುವ ದೌರ್ಜನ್ಯ ತಡೆಯುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಗಸ್ತು ವಾಹನಗಳು ಕೆಲಸ ಮಾಡುತ್ತಿಲ್ಲ. ಸಿಸಿಟಿವಿ ಕ್ಯಾಮರಾಗಳು ಕಾರ್ಯ ನಿರ್ವಹಿಸುತ್ತಿಲ್ಲ ಎಂದು ದೂರಿದರು.
ಎಲ್ಲೆಡೆ ಡ್ರಗ್ಸ್ ಹಾವಳಿ ಹೆಚ್ಚಾಗಿದೆ. ಸಣ್ಣ ಸಣ್ಣ ಹಳ್ಳಿಗಳಿಗೂ ವ್ಯಾಪಿಸಿದೆ. ಕಾನೂನು ಸುವ್ಯವಸ್ಥೆ ಹಾಳಾಗಲು ಇದೂ ಒಂದು ಕಾರಣವಾಗಿದೆ. ಪೊಲೀಸರು ತುರ್ತು ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ಕೊಟ್ಟರು. ಶಕ್ತಿ ಯೋಜನೆ ಮಹಿಳೆಯರಿಗೆ ಶಾಪವಾಗಿದೆ. ಶಕ್ತಿ ಯೋಜನೆ ಹೆಸರಲ್ಲಿ ಉಚಿತ ಸೇವೆ ಕೊಡುತ್ತಿರುವ ಸರ್ಕಾರ ಮಹಿಳೆಯರ ರಕ್ಷಣೆ ಮರೆತಿದೆ. ಶಾಲೆ ಕಾಲೇಜ್ ವಿದ್ಯಾರ್ಥಿಗಳಿಗೆ, ಉದ್ಯೋಗಸ್ಥರಿಗೆ ಬಸ್ಸಲ್ಲಿ ಜಾಗ ಸಿಗುತ್ತಿಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಪ್ರಧಾನ ಕಾರ್ಯದರ್ಶಿ ಸಂತೋಷ ಆಲದಕಟ್ಟಿ, ಡಾ.ಶೋಭಾ ನಿಸ್ಸಿಮಗೌಡ್ರ, ಭಾರತಿ ಜಂಬಗಿ, ಲಲಿತಾ ಗುಂಡೇನಹಳ್ಳಿ, ಇತರರಿದ್ದರು.