ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ಆ.22ರಂದು

Published on

ಹಾವೇರಿ: ಕಾಂಗ್ರೆಸ್ ಮುಖಂಡರ ವರ್ತನೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಆ.22ರಂದು ಬೆಳಗ್ಗೆ 10 ಗಂಟೆಗೆ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ತನ್ನ ವೈಫಲ್ಯಗಳನ್ನು ಮರೆಮಾಚಲು ಹಾಗೂ ಭ್ರಷ್ಟಾಚಾರದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಹೆಣಗಾಡುತ್ತಿದೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಅತ್ಯಂತ ಕೀಳುಮಟ್ಟದ ಶಬ್ದಗಳನ್ನು ಪ್ರಯೋಗಿಸುತ್ತಿರುವ ಕಾಂಗ್ರೆಸ್ ಪಕ್ಷದ ಮುಖಂಡರು ಸಂವಿಧಾನ ಬಾಹಿರವಾಗಿ ವರ್ತಿಸುತ್ತಿದ್ದಾರೆ. ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ಬೆದರಿಸುತ್ತಿದ್ದಾರೆ. ಪ್ರಧಾನ ಮಂತ್ರಿಯವರಿಗೆ ಜೀವಬೆದರಿಕೆ ಹಾಕುತ್ತಿರುವ ಕಾಂಗ್ರೆಸ್ ಮುಖಂಡರ ವರ್ತನೆ ವಿರೋಧಿಸಿ ಸಂವಿಧಾನ ಉಳಿವಿಗಾಗಿ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟಿಸಲಾಗುವುದು.
ಬೆಳಗ್ಗೆ 10 ಗಂಟೆಗೆ ಹಾವೇರಿ ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಪಾದಯಾತ್ರೆ ಪ್ರಾರಂಭವಾಗಿ ಎಂಜಿ ರಸ್ತೆಯ ಮುಖಾಂತರ ಶ್ರೀ ಹೊಸಮನಿ ಸಿದ್ದಪ್ಪ ವೃತ್ತ ತಲುಪಿ ವೃತ್ತದಲ್ಲಿ ಪ್ರತಿಭಟನೆ ಮಾಡಲಾಗುವುದು. ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಗೆ ಆಗಮಿಸಬೇಕು ಎಂದು ಬಿಜೆಪಿ ಜಿಲ್ಲಾ ಘಟಕ ಪ್ರಕಟಣೆ ಮೂಲಕ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net