ಹಾವೇರಿ: ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಸೆ.8ರಂದು ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಕಳೆದ 40 ದಿನಗಳಿಂದ ಜಿಲ್ಲೆಯಾದ್ಯಂತ ಮಳೆಯಿಲ್ಲದೇ ರೈತರ ಬೆಳೆಗಳು ಸಂಪೂರ್ಣ ಒಣಗಿ ನಾಶವಾಗಿವೆ. ರಾಜ್ಯ ಸರ್ಕಾರ ಈವರೆಗೆ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಘೋಷಿಸಿಲ್ಲ. ರೈತರಿಗೆ ಸೂಕ್ತ ಬೆಳೆಹಾನಿ ಪರಿಹಾರ ವಿತರಿಸಿಲ್ಲ. ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಅವಧಿ ಕಡಿಮೆ ಮಾಡಿದ್ದಾರೆ. ಬಿಜೆಪಿ ಸರ್ಕಾರದ ಅನೇಕ ರೈತಪರ ಯೋಜನೆಗಳನ್ನು ರದ್ದುಪಡಿಸಿದ್ದಾರೆ. ಈ ಎಲ್ಲ ಅಂಶಗಳನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ರೈತರು, ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಚಿನ್ನಿಕಟ್ಟಿ, ಹನುಮಂತಪ್ಪ ತಳವಾರ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.
ಹಾಲಿ, ಮಾಜಿ ಶಾಸಕರ ನೇತೃತ್ವದ
ಹಾವೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಶಿವಕುಮಾರ ಉದಾಸಿ, ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಗವಿಸಿದ್ದಪ್ಪ ದ್ಯಾಮಣ್ಣನವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಹಿರೇಕೆರೂರಲ್ಲಿ ಮಾಜಿ ಸಚಿವ ಬಿ.ಸಿ.ಪಾಟೀಲ, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಪಾಲಾಕ್ಷಗೌಡ ಪಾಟೀಲ, ಬ್ಯಾಡಗಿಯಲ್ಲಿ ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ, ಶಿಗ್ಗಾಂವಿ- ಸವಣೂರಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಣೇಬೆನ್ನೂರಲ್ಲಿ ಮಾಜಿ ಶಾಸಕ ಅರುಣಕುಮಾರ ಪೂಜಾರ, ಹಾನಗಲ್ಲನಲ್ಲಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಲ್ಯಾಣಕುಮಾರ ಶೆಟ್ಟರ, ಮಾಜಿ ಶಾಸಕ ಶಿವರಾಜ ಸಜ್ಜನರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.