

ಹಾವೇರಿ: ಮಕ್ಕಳಿಗೆ ಬಾಲ್ಯ ವಿವಾಹದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಆರ್.ಮುತಾಲಿಕದೇಸಾಯಿ ಹೇಳಿದರು.
ನಗರದ ಗೆಳೆಯರ ಬಳಗ ಪ್ರೌಢಶಾಲೆಯಲ್ಲಿ ಸೋಮವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಇತರ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಬಾಲ್ಯವಿವಾಹ ನಿಷೇಧ ಕುರಿತ ಅರಿವು ಕಾರ್ಯಕ್ರಮ ಹಾಗೂ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದರೆ ಕೂಡಲೇ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಬೇಕು. ಮಕ್ಕಳು ಬಾಲ್ಯ ವಿವಾಹಕ್ಕೆ ಒಳಗಾಗದೇ ಶಿಕ್ಷಣ ಪಡೆಯಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ ಮಾತನಾಡಿ, ಬಾಲ್ಯ ವಿವಾಹವಾದಲ್ಲಿ ಸಣ್ಣ ವಯಸ್ಸಿನಲ್ಲಿಯೇ ಗರ್ಭಿಣಿಯಾಗಿ ಕಡಿಮೆ ತೂಕದ ಮಕ್ಕಳ ಜನನ, ತಾಯಂದಿರ ಮರಣ, ಶಿಶು ಮರಣ, ಬುದ್ದಿಮಾಂದ್ಯ ಮಗು ಹುಟ್ಟುವ ಸಾಧ್ಯತೆ ಇರುತ್ತದೆ. ಬಾಲ್ಯವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಪ್ರಸ್ತುತ ವರ್ಷ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲರೂ ಶ್ರಮಿಸೋಣ ಎಂದು ಹೇಳಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್ ಮಾತನಾಡಿ, ಬಾಲ್ಯವಿವಾಹ ಹಾಗೂ ಪೊಕ್ಸೋ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗಿ ಕಂಡುಬರುವ ಕಾರಣ ಶಾಲೆಗಳಲ್ಲಿ ಮಕ್ಕಳಿಗೆ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮಕ್ಕಳು ಧೈರ್ಯವಾಗಿ ಮಕ್ಕಳ ಸಹಾಯವಾಣಿ-1098ಗೆ ಕರೆ ಮಾಡಿ ಮಾಹಿತಿ ನೀಡುತ್ತಿರುವುದರಿಂದ ಪ್ರಕರಣಗಳು ಬೆಳಗಿಗೆ ಬರುತ್ತಿವೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ, ಮುಖ್ಯೋಪಾಧ್ಯಾಯೆ ಪುಷ್ಪವತಿ ಕೆರೂಡಿ, ಇತರರು ಉಪಸ್ಥಿತರಿದ್ದರು. ಮಕ್ಕಳಿಂದ ಜಾಥಾ:
ಹಾವೇರಿಯ ಗೆಳೆಯರ ಬಳಗ ಪ್ರೌಢ ಶಾಲೆಯಿಂದ ಹೊರಟ ಬಾಲ್ಯವಿವಾಹ ನಿಷೇಧ ಜಾಗೃತಿ ಜಾಥಾ, ತಾಲೂಕು ಪಂಚಾಯಿತಿ ಕಚೇರಿವರೆಗೆ ಸಾಗಿತು. ವಿದ್ಯಾರ್ಥಿಗಳು ಬಾಲ್ಯವಿವಾಹ ನಿಷೇಧದ ಕುರಿತು ಘೋಷಣೆಗಳನ್ನು ಕೂಗುವ ಮೂಲಕ ಜಾಗೃತಿ ಮೂಡಿಸಿದರು.