

ಹಾವೇರಿ: ಮಕ್ಕಳು ದೇಶದ ಭವಿಷ್ಯವಾಗಿದ್ದು, ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಸ್ಥಾನಗಳನ್ನು ಅಲಂಕರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ.ಸಿ.ಸದಾನಂದಸ್ವಾಮಿ ಮಕ್ಕಳಿಗೆ ಕಿವಿಮಾತು ಹೇಳಿದರು.
ನಗರದ ಚನಬಸಪ್ಪ ಮಾಗಾವಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗುರುವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಪ್ರಥಮ ಪ್ರಧಾನಮಂತ್ರಿ ದಿ.ಜವಾಹರಲಾಲ ನೆಹರು ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ. ಮಕ್ಕಳು ಇತಿಹಾಸವನ್ನು ತಿಳಿದುಕೊಳ್ಳಬೇಕು ಹಾಗೂ ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಅರಿವು ಹೊಂದಬೇಕು ಎಂದು ಸಲಹೆ ನೀಡಿದರು.
ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಾಲಮುಕುಂದ ರಮೇಶರಾವ್ ಮುತಾಲಿಕದೇಸಾಯಿ ಮಕ್ಕಳ ಸಹಾಯವಾಣಿ 1098 ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯವಾಣಿ 15100 ಕುರಿತು ಮಾಹಿತಿ ನೀಡಿದರು.
ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಸದುಪಯೋಗ ಆಗಬೇಕು. ಯಾವುದಾದರೂ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಾನೂನು ನೆರವು ಪಡೆದುಕೊಳ್ಳಬಹುದು ಎಂದು ಹೇಳಿದರು.
ಉಪ ಕಾನೂನು ನೆರವು ಅಭಿರಕ್ಷಣಾ ವಕೀಲ ಎಂ.ಸಿ.ಭರಮಣ್ಣನವರ ಅವರು ಮಕ್ಕಳ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ, ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ, ಬಿಇಒ ಮೌನೇಶ ಬಡಿಗೇರ, ಡಾ.ಶ್ರವಣ ಪಂಡಿತ, ಡಾ.ಗುಹೇಶ್ವರ ಪಾಟೀಲ, ಮುಖ್ಯೋಪಾಧ್ಯಾಯೆ ಪುಷ್ಪಾವತಿ ಕೆರೂಡಿ, ಕಾಂತೇಶ ಎಫ್.ಯು, ಇತರರು ಉಪಸ್ಥಿತರಿದ್ದರು.