

ಹಾವೇರಿ: ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರಾಜ್ಯದ ಅಭಿವೃದ್ಧಿಗೆ ಯಾವುದೇ ಅನುದಾನ ಮತ್ತು ವಿಶೇಷ ಯೋಜನೆಗಳನ್ನು ಘೋಷಿಸಿಲ್ಲ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಶನಿವಾರ ಚೊಂಬು ಹಿಡಿದು ಪ್ರತಿಭಟನೆ ನಡೆಸಲಾಯಿತು.
ನಗರದ ಮೈಲಾರ ಮಹದೇವಪ್ಪ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಮೆರವಣಿಗೆ ನಡೆಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು, ಚೊಂಬು ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ದೇಶದಲ್ಲೇ ಅತಿ ಹೆಚ್ಚು ಜಿಎಸ್‌ಟಿ ಪಾವತಿಸುವ ರಾಜ್ಯವಾಗಿದೆ. ಆದರೂ ರಾಜ್ಯಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ವಿಶೇಷ ಯೋಜನೆ ಘೋಷಿಸದೇ ಅನ್ಯಾಯ ಎಸಗಿದೆ. ರಾಜ್ಯದ ಅಭಿವೃದ್ಧಿಗೆ ಯಾವುದೇ ಅನುದಾನ ನೀಡದೇ, ಜನತೆಗೆ ನಿರಾಶೆ ಮಾಡಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.
ಬಿಜೆಪಿ ಜೊತೆಗಿನ ಮೈತ್ರಿಕೂಟದ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಮಾತ್ರ ಹೆಚ್ಚಿನ ಅನುದಾನ ನೀಡಲಾಗಿದೆ. ರಾಜ್ಯಕ್ಕೆ ಚೊಂಬು ಮಾತ್ರ ಸಿಕ್ಕಿದೆ. ಕಾಂಗ್ರೆಸ್ ಸರ್ಕಾರವಿರುವ ರಾಜ್ಯಕ್ಕೆ ಅನ್ಯಾಯ ಮಾಡಿರುವ ಕೇಂದ್ರ ಸರ್ಕಾರಕ್ಕೆ ಜನತೆಯೇ ತಕ್ಕ ಪಾಠ ಕಲಿಸುವ ಕಾಲ ಬಂದಿದೆ ಎಂದು ಛಾಟಿ ಬೀಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎಂ.ಹಿರೇಮಠ, ಗಡಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಸೋಮಣ್ಣ ಬೇವಿನಮರದ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ, ಮಾಜಿ ಶಾಸಕ ನೆಹರು ಓಲೇಕಾರ, ಜಿಪಂ ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗೆಣ್ಣಿ, ಕರ್ಜಗಿ ಬ್ಲಾಕ್ ಅಧ್ಯಕ್ಷ ಎಂ.ಎಂ.ಮೈದೂರ, ನಗರ ಘಟಕ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹಿರೇಮಠ, ನಗರ ಮಹಿಳಾ ಅದ್ಯಕ್ಷೆ ಶಾಂತಮ್ಮ ಶಿರೂರ, ನಗರಸಭೆ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಇತರರು ಪಾಲ್ಗೊಂಡಿದ್ದರು.