

ಹಾವೇರಿ: ಸುಳ್ಳು ದಾಖಲೆ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಗ್ರಾಮ ಪಂಚಾಯಿತಿ ಸದಸ್ಯೆಯಾಗಿ, ಅಧ್ಯಕ್ಷೆಯಾಗಿ ಅಧಿಕಾರ ಅನುಭವಿಸುವ ಮೂಲಕ ಸರ್ಕಾರಕ್ಕೆ ಮೋಸ ಮಾಡಿದ ಆರೋಪದಡಿ ಮಹಿಳೆಯೊಬ್ಬರು ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಈ ಮೂಲಕ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.
ಶಿಗ್ಗಾಂವಿ ತಾಲೂಕು ವನಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮೀ ಮಾರುತಿ ಕಬ್ಬೇರ ಶಿಕ್ಷೆಗೀಡಾದ ಮಹಿಳೆ.
ಲಕ್ಷ್ಮೀ ಕಬ್ಬೇರ ತಾನು ಹಿಂದು ಗಂಗಾಮತ (ಪ ವರ್ಗ-1)ಕ್ಕೆ ಸೇರಿದ್ದಾರೆ. ಆದರೂ ಸುಳ್ಳು ವ್ಯಾಸಂಗ ಪ್ರಮಾಣಪತ್ರ ಹಾಗೂ ಸುಳ್ಳು ಅಫಿಡವಿಟ್ ಘೋಷಣಾ ಪತ್ರ ಹಾಗೂ ಇತರೆ ದಾಖಲಾತಿಗಳನ್ನು ಸೃಷ್ಟಿಸಿ 2015ರಲ್ಲಿ ಶಿಗ್ಗಾಂವಿ ತಹಸೀಲ್ದಾರ್ ಕಚೇರಿಯಿಂದ ಹಿಂದು ಗಂಟಿಚೋರ್ಸ್ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದಿದ್ದರು.
ಹನುಮರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿದ್ದ ಸ್ಥಾನಕ್ಕೆ ಸ್ಪರ್ಧಿಸಿ ಆಯ್ಕೆಯಾಗಿದ್ದರು.ನಂತರ ಎಸ್.ಸಿ. ಸ್ಥಾನಕ್ಕೆ ಮೀಸಲಾಗಿದ್ದ ಗ್ರಾಪಂ ಅಧ್ಯಕ್ಷರಾಗಿಯೂ ಆಯ್ಕೆಯಾಗಿದ್ದದರು.
ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಸರ್ಕಾರಕ್ಕೆ ಮತ್ತು ನೈಜ ಪರಿಶಿಷ್ಟ ಜಾತಿಯ ಅಭ್ಯರ್ಥಿಗೆ ಮೋಸ ಮಾಡಿದ ಕುರಿತಂತೆ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ದಾವಣಗೆರೆ ಡಿಸಿಆರ್‌ಒ ಪೊಲೀಸ್ ಇನ್ಸಪೆಕ್ಟರ್ ಟಿ.ಜಿ ಶ್ರೀಧರ ಶಾಸ್ತ್ರೀ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಿ.ಎಲ್ ಲಕ್ಷ್ಮೀ ನಾರಾಯಣ ಅವರು ಗುರುವಾರ ಅಪರಾಧಿಗೆ ಏಳು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 19 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಸರೋಜಾ ಕೂಡಲಗಿಮಠ ವಾದ ಮಂಡಿಸಿದ್ದರು.