ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಕಠಿಣ ಶಿಕ್ಷೆ; ಬಾಲಕಿ ಅಪಹರಿಸಿಕೊಂಡು ಹೋಗಿ ಹಿಂಸೆ ನೀಡಿದ್ದವ ಕಂಬಿ ಹಿಂದೆ

Judgement
Published on

ಹಾವೇರಿ: ಹದಿನೈದು ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ವಾಸ ಶಿಕ್ಷೆ ಹಾಗೂ 1,05,000 ರೂ. ದಂಡ ವಿಧಿಸಿ ವಿಶೇಷ ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ- 1) ತೀರ್ಪು ನೀಡಿದೆ.
ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಷಂಶಿಪುರದ ಅರ್ಜುನ ಹನುಮಂತಪ್ಪ ಶಿಕ್ಷೆಗೀಡಾದವ.
ಈತ ಜೂನ್ 7, 2023ರಂದು 15 ವರ್ಷ 6 ತಿಂಗಳ ಅಪ್ರಾಪ್ತೆಯನ್ನು ಬೈಕ್‌ನಲ್ಲಿ ಅಪಹರಿಸಿಕೊಂಡು ಹೋಗಿ ಹರಿಹರ ತಾಲೂಕು ಗುತ್ತೂರ ಗ್ರಾಮದ ಮನೆಯೊಂದರಲ್ಲಿ ಇಟ್ಟಿದ್ದ. ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತು ಹಾವೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ಸಿಪಿಐ ಚಿದಾನಂದ ಸಿ. ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಹಾವೇರಿ ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶ ನಿಂಗೌಡ ಪಾಟೀಲ ಅವರು ಮೇಲಿನಂತೆ ತೀರ್ಪು ನೀಡಿದ್ದಾರೆ. ದಂಡದ ಹಣದಲ್ಲಿ ಬಾಲಕಿಗೆ 80 ಸಾವಿರ ರೂ. ಹಾಗೂ ರಾಜ್ಯ ಸರ್ಕಾರ ನೊಂದವರ ಪರಿಹಾರ ನಿಧಿಯಿಂದ 4 ಲಕ್ಷ ರೂ. ಪರಿಹಾರ ನೀಡಬೇಕೆಂದು ಆದೇಶಿಸಿದ್ದಾರೆ.
ವಿಶೇಷ ಸರ್ಕಾರಿ ಅಭಿಯೋಜಕ ವಿಜಯಕುಮಾರ ಪಾಟೀಲ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net