

ಹಾವೇರಿ: ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದೆ. ಕ್ರೀಡಾ ಸ್ಪರ್ಧೆಗಳಲ್ಲಿ ಸೋಲು ಗೆಲುವು ಸಾಮಾನ್ಯವಾಗಿದ್ದು, ಎಲ್ಲರೂ ಕ್ರೀಡಾಮನೋಭಾವದಿಂದ ಭಾಗವಹಿಸಬೇಕು ಎಂದು ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಹೇಳಿದರು.
ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾಗೂ ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡಾಕೂಟಗಳು ಆತ್ಮವಿಶ್ವಾಸ ಹೆಚ್ಚಿಸುವುದರ ಜತೆಗೆ ಕ್ರಿಯಾಶೀಲರನ್ನಾಗಿ ಮಾಡುತ್ತವೆ. ಪಾಲಕರು ಮಕ್ಕಳು ಕ್ರೀಡೆಯಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹ ನೀಡಬೇಕು. ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹೇಳಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಹಿರೇಮಠ ಕ್ರೀಡಾಜ್ಯೋತಿ ಬೆಳಗಿಸಿ ಮಾತನಾಡಿದರು. ಕ್ರೀಡಾಪಟುಗಳು ತಮ್ಮ ಪ್ರತಿಭೆ ಹೊರಹಾಕಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಿವೆ. ಜಿಲ್ಲೆಯ ಕ್ರೀಡಾಪಟುಗಳು, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಹೇಳಿದರು.
ಜಿ.ಪಂ.ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಎಚ್.ಉಮೇಶಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ, ರಮೇಶ ಆನವಟ್ಟಿ, ಸಲೀಂ ಪಟವೇಗಾರ, ಆರ್.ವಿ.ನಂದಾವಿ, ಚಂದ್ರಶೇಖರ ಅಂದಾನಿಗೌಡ್ರ, ಸಿ.ಎಚ್.ಜಾಡರ, ರವೀಂದ್ರ ಶೆಟ್ಟರ, ಇತರರು ಉಪಸ್ಥಿತರಿದ್ದರು.