

ಹಾವೇರಿ: ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ವರ್ಷದ ಭತ್ತ ಉತ್ಪನ್ನ ಖರೀದಿ ಕೇಂದ್ರಗಳನ್ನು ಜಿಲ್ಲೆಯ ವಿವಿಧ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣಗಳಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನಿಷ್ಠ ಬೆಂಬಲ ಬೆಲೆಯಡಿ ಸರ್ಕಾರದ ಮಾರ್ಗಸೂಚಿಯಂತೆ ಭತ್ತ ಖರೀದಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ 2,369 ರೂ. ಹಾಗೂ ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್‌ಗೆ 2,389 ರೂ.ನಂತೆ ಭತ್ತ ಖರೀದಿಗೆ ಸೆ.15ರಿಂದ ಅ.31ರವರೆಗೆ ರೈತರ ನೋಂದಣಿ ಪ್ರಕ್ರಿಯೆ ಕೈಗೊಳ್ಳಲು ಹಾಗೂ ನ.1ರಿಂದ ಫೆಬ್ರವರಿ 28, 2026ರವರೆಗೆ ನೋಂದಾಯಿತ ರೈತರಿಂದ ಭತ್ತ ಖರೀದಿಸಬೇಕು. ಮಿಲ್‌ಗಳಲ್ಲಿ ಶೇಖರಿಸುವ ಮತ್ತು ಪರಿವರ್ತಿಸುವ ಕಾರ್ಯ ಕೈಗೊಳ್ಳಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಸಂಸ್ಥೆಯ ಮೂಲಕ ಖರೀದಿಸಲು ಆದೇಶಿಸಿದರು.
ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಲ್‌ನಂತೆ ಗರಿಷ್ಠ 50 ಕ್ವಿಂಟಲ್ ಭತ್ತ ಖರೀದಿಸಲು ಅವಕಾಶವಿದೆ. ರೈತರಿಂದ ಖರೀದಿಸಿದ ಉತ್ಪನಗಳ ಮೊತ್ತವನ್ನು ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಯಾದ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಜಮೆ ಮಾಡಬೇಕು ಎಂದು ಸೂಚನೆ ನೀಡಿದರು.
ಬೆಂಬಲ ಬೆಲೆಯಡಿ ಭತ್ತ ಉತ್ಪನ್ನ ಖರೀದಿ ಕೇಂದ್ರ ಆರಂಭಿಸಿರುವ ಕುರಿತಂತೆ ವ್ಯಾಪಕ ಪ್ರಚಾರನಡೆಸಿ, ಕರಪತ್ರ, ಬ್ಯಾನರ್ ಅಳಡಿಸುವ ಮೂಲಕ ರೈತರಿಗೆ ಮಾಹಿತಿ ತಲುಪಿಸಬೇಕು. ರೈತರಿಂದ ಖರೀದಿಸಿದ ಭತ್ತ ಉತ್ಪನ್ನ ದಾಸ್ತಾನು ಮಾಡಿಕೊಳ್ಳಲು ಮುಂಜಾಗ್ರತಾ ಕ್ರಮವಾಗಿ ಉಗ್ರಾಣಗಳನ್ನು ಕಾಯ್ದಿರಿಸಬೇಕು ಎಂದರು.
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ 29,836 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆಯಾಗಿದೆ. ಹಾನಗಲ್ಲ ತಾಲೂಕಿನ 14,620, ಶಿಗ್ಗಾಂವಿ 6,681, ಹಿರೇಕೆರೂರ ಮತ್ತು ರಟ್ಟಿಹಳ್ಳಿ ತಾಲೂಕಿನಲ್ಲಿ 1,780 ಹಾಗೂ ರಾಣೆಬೆನ್ನೂರ ತಾಲೂಕು 6,220 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕೆ.ಮಲ್ಲಿಕಾರ್ಜುನ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಸಹಕಾರಿ ಸಂಘಗಳ ಉಪನಿಬಂಧಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಶಾಖಾ ವ್ಯವಸ್ಥಾಪಕರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ, ಇತರರು ಉಪಸ್ಥಿತರಿದ್ದರು.
ಎಲ್ಲೆಲ್ಲಿ ಸೆಂಟರ್ ?
ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಕೇಂದ್ರಗಳನ್ನು ಹಾನಗಲ್ಲ, ರಾಣೆಬೆನ್ನೂರ, ಶಿಗ್ಗಾಂವಿ, ಹಿರೆಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾರುಕಟ್ಟೆ ಪ್ರಾಂಗಣದಲ್ಲಿ ತೆರೆಯಲು ಸೂಚಿಸಲಾಗಿದೆ.