ಡೆಂಘೆ ತಡೆಗೆ ಜನರ ಸಹಕಾರ ಮುಖ್ಯ; ಆರಂಭದಲ್ಲೇ ಪತ್ತೆ ಹಚ್ಚಿ, ಚಿಕಿತ್ಸೆ ಪಡೆದರೆ ಉತ್ತಮ; ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ ಸಲಹೆ

17 HVR 7
Published on

ಹಾವೇರಿ: ಈಡಿಸ್ ಈಜಿಪ್ಟ್ ಸೊಳ್ಳೆ ಕಚ್ಚುವುದರಿಂದ ಡೆಂಘೆ ರೋಗ ಬರುತ್ತದೆ. ಡೆಂಘೆ ತಡೆಗೆ ಆರೋಗ್ಯ ಇಲಾಖೆ ಜತೆಗೆ ಸಾರ್ವಜನಿಕರ ಸಹಕಾರ ಹಾಗೂ ಸಹಭಾಗಿತ್ವ ಬಹಳ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು.

ನಗರದ ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಡೆಂಘೆ ದಿನಾಚರಣೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪೌರಕಾರ್ಮಿಕರಿಗೆ ಕೀಟಜನ್ಯ ರೋಗಗಳ ಕುರಿತು ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಡೆಂೆ ರೋಗಕ್ಕೆ ನಿಗಧಿತ ಚಿಕಿತ್ಸೆ ಇರುವುದಿಲ್ಲ, ಜ್ವರ ಕಾಣಿಸಿಕೊಂಡ ತಕ್ಷಣ ನಿರ್ಲಕ್ಷ್ಯ ಮಾಡದೇ ಸಕಾಲದಲ್ಲಿ ಪರೀಕ್ಷೆ ಮಾಡಿಕೊಂಡು ಪ್ರಾರಂಭದಲ್ಲೇ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆದಲ್ಲಿ ಬೇಗ ಗುಣಮುಖರಾಗಬಹುದು ಹಾಗೂ ಸಾವು-ನೋವುಗಳನ್ನು ತಪ್ಪಿಸಬಹುದು. ಡೆಂೆ ನಿಯಂತ್ರಣಕ್ಕೆ ನಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಹಾಗೂ ಘನತ್ಯಾಜ್ಯ ವಸ್ತುಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸರಿತಾ ಮಾತನಾಡಿ, ಜನವರಿಯಲ್ಲಿ ಡೆಂೆ ನಿಯಂತ್ರಣ ಕುರಿತು ಜಿಲ್ಲೆಯ 345 ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶದ ಸೂಕ್ಷ್ಮ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಲಾಗಿದೆ. ಕಳೆದ ಸಾಲಿನ ಏಪ್ರಿಲ್‌ನಲ್ಲಿ 64 ಡೆಂೆ ಪ್ರಕರಣಗಳು ಪತ್ತೆಯಾಗಿದ್ದವು. ಈ ವರ್ಷ ಏಪ್ರಿಲ್‌ನಲ್ಲಿ 20 ಪ್ರಕರಣಗಳು ಪತ್ತೆಯಾಗಿವೆ. ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದು ಸಲಹೆ ನೀಡಿದರು.

ಡಾ.ನಿಲೇಶ, ಡಾ.ಚನ್ನಬಸಯ್ಯ ವಿರಕ್ತಮಠ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ, ಸುರೇಶ, ಇತರರು ಉಪಸ್ಥಿತರಿದ್ದರು.

ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಚನ್ನಪ್ಪ ಸ್ವಾಗತಿಸಿದರು. ಹಿರಿಯ ಆರೋಗ್ಯ ನಿರೀಕ್ಷಕ ಖುಷಿ ನಿರೂಪಿಸಿದರು.

ಕಳೆದ ವರ್ಷ 800 ಕೇಸ್

ಕಳೆದ ವರ್ಷ ರಾಜ್ಯದಲ್ಲಿ 33 ಸಾವಿರ ಡೆಂಘೆ ಪ್ರಕರಣಗಳು ಪತ್ತೆಯಾಗಿದ್ದು, 18 ಜನ ಮೃತಪಟ್ಟಿದ್ದರು. ಹಾವೇರಿ ಜಿಲ್ಲೆಯಲ್ಲಿ 800 ಪ್ರಕರಣಗಳಲ್ಲಿ ಎರಡು ಜನ ಮೃತಪಟ್ಟಿದ್ದರು. ಕಳೆದ ವರ್ಷ ಜುಲೈನಲ್ಲಿ ಜಿಲ್ಲೆಯಲ್ಲಿ ಡೆಂೆ ಪ್ರಕರಣಗಳು ಹೆಚ್ಚಾಗಿದ್ದವು. ಆಗಸ್ಟ್‌ನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪೌರ ಕಾರ್ಮಿಕರು ಸೇರಿ ಎಲ್ಲರೂ ಯುದ್ದೋಪಾದಿಯಲ್ಲಿ ಉತ್ತಮ ಕೆಲಸ ಮಾಡಿದ್ದೀರಿ. ಅದೇ ರೀತಿ ಈ ವರ್ಷವೂ ಕೆಲಸ ಮಾಡಿ. ಎಲ್ಲ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು. ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಡಿಸಿ ನಿರ್ದೇಶಿಸಿದರು.

ಫೀವರ್ ಕ್ಲಿನಿಕ್ ಆರಂಭ

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಮಾತನಾಡಿ, ಡೆಂಘೆ ಮಾರಣಾಂತಿಕ ಕಾಯಿಲೆ ಅಲ್ಲ. ಆದರೆ, ನಿರ್ಲಕ್ಷ್ಯ ಮಾಡಿದರೆ ಮರಣ ಸಾಧ್ಯತೆ ಇರುತ್ತದೆ. ಹಾಗಾಗಿ, 24 ಗಂಟೆಯೊಳಗೆ ಜ್ವರ ಕಡಿಮೆಯಾಗದಿದ್ದರೆ ಕೂಡಲೇ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷಿಸಿಕೊಳ್ಳಬೇಕು. ಡೆಂಘೆ ಪರೀಕ್ಷೆಗೆ ಎಲ್ಲ ಆಸ್ಪತ್ರೆಗಳಲ್ಲಿ ರ‌್ಯಾಪಿಡ್ ಕಿಟ್ ವ್ಯವಸ್ಥೆ ಮಾಡಲಾಗಿದೆ. ಮೂರಕ್ಕಿಂತ ಅಧಿಕ ಡೆಂಘೆ ಪ್ರಕರಣಗಳು ಕಂಡು ಬಂದ ಪ್ರದೇಶದಲ್ಲಿ ಫೀವರ್ ಕ್ಲಿನಿಕ್ ಆರಂಭಿಸಿ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net