ಉಷ್ಣಾಂಶ ಹೆಚ್ಚಳ, ಇರಲಿ ಎಚ್ಚರ; ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ; ಡಿಸಿ ಡಾ.ವಿಜಯಮಹಾಂತೇಶ ಸೂಚನೆ

6 HVR 4
Published on

ಹಾವೇರಿ: ಬೇಸಿಗೆಯಲ್ಲಿ ಬಿಸಿಲಿನ ತಾಪದಿಂದ ಉಷ್ಣಾಂಶವು ಹೆಚ್ಚಾಗಿರುವುದರಿಂದ ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಅನುಸರಿಸುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಬುಧವಾರ ಹವಾಮಾನ ಬದಲಾವಣೆ ಮತ್ತು ಮಾನವನ ಆರೋಗ್ಯ ಕುರಿತ ರಾಷ್ಟ್ರೀಯ ಕಾರ್ಯಕ್ರಮ, ಕೀಟಜನ್ಯ ರೋಗಗಳ ನಿಯಂತ್ರಣ ಕಾರ್ಯಕ್ರಮ ಹಾಗೂ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೇಸಿಗೆಯಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಮನೆಯಿಂದ ಹೊರಗಡೆ ಹೋಗುವಾಗ ಸಡಿಲವಾದ ತೆಳು ಬಿಳಿ ಬಣ್ಣದ ಹತ್ತಿ ಬಟ್ಟೆ ಧರಿಸಬೇಕು. ಜತೆಯಲ್ಲಿ ತಪ್ಪದೇ ಶುದ್ಧ ಕುಡಿಯುವ ನೀರನ್ನು ಮನೆಯಿಂದ ಹೋಗುವಾಗ ತೆಗೆದುಕೊಂಡು ಹೋಗಬೇಕು. ಯಥೇಚ್ಛವಾಗಿ ನೀರು ಕುಡಿಯಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್., ನಗರಾಭಿವೃದ್ಧಿ ಕೋಶದ ಜಿಲ್ಲಾ ಯೋಜನಾಧಿಕಾರಿ ಮಮತಾ ಹೊಸಗೌಡ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ ಪಾಟೀಲ, ತಾಲೂಕಾ ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಶುದ್ಧ, ಸಾತ್ವಿಕ ಆಹಾರ ಸೇವಿಸಿ :

ಮನೆಯಲ್ಲಿ ಸಿದ್ಧಪಡಿಸಿದ ನಿಂಬೆ ಹಣ್ಣಿನ ಶರಬತ್ತು, ಎಳನೀರು ಮತ್ತು ಮಜ್ಜಿಗೆ ಆಗಾದ ಸೇವಿಬೇಕು. ನುಣುಪಾದ ಹತ್ತಿ ಬಟ್ಟೆ ಮತ್ತು ಕರವಸ್ತ್ರದಿಂದ ಬೆವರು ಒರೆಸಬೇಕು. ಬೆಚ್ಚಗಿನ ಮಸಾಲಾ ರಹಿತ ಶುದ್ಧ ಸಾತ್ವಿಕ ಆಹಾರ ಸೇವಿಸಬೇಕು ಹಾಗೂ ಗಾಳಿಯಾಡುವ ಚಪ್ಪಲಿ ಧರಿಸಬೇಕು. ಬೇಸಿಗೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ವಾಂತಿ ಭೇದಿ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಶುದ್ಧೀಕರಿಸಿದ ಅಥವಾ ಶುದ್ಧಿಕರಣ ಘಟಕದ ನೀರನ್ನು ಕುಡಿಯಲು ಬಳಸಬೇಕು ಎಂದು ಡಿಸಿ ಸಲಹೆ ನೀಡಿದರು.

108/ 102ಕ್ಕೆ ಕರೆ ಮಾಡಿ

ಬಿಸಿಲಿನಲ್ಲಿರುವ ಯಾವುದೇ ವ್ಯಕ್ತಿ ಅಪಾಯದ ಚಿಹ್ನೆಗಳಾದ ತೊದಲು ಮಾತು, ಅರ್ಥರಹಿತವಾಗಿ ಬಡಬಡಿಸುವುದು, ಚರ್ಮ ಕೆಂಪಾಗುವುದು, ಬೆವರು ಕಡಿಮೆಯಾಗುವುದು, ದೇಹದ ಉಷ್ಣತೆ (40ಡಿಗ್ರಿಗಿಂತ) ಜಾಸ್ತಿಯಾಗುವುದು, ಉಸಿರಾಟದ ತೊಂದರೆಯಾದಲ್ಲ್ಲಿ ಕೂಡಲೇ ನೆರಳಿನ ಪ್ರದೇಶಕ್ಕೆ ಸ್ಥಳಾಂತರಿಸಿ ಕೆಳಗೆ ಮಲಗಿಸಿ, ದೇಹದ ಎಲ್ಲ ಭಾಗಗಳನ್ನು ಒಳಗೊಂಡಂತೆ ಒದ್ದೆ ಬಟ್ಟೆಯಿಂದ ಒರೆಸಬೇಕು. ಸೂರ್ಯಾಘಾತ ಅಪಾಯದ ಚಿಹ್ನೆಗಳು ಮುಂದುವರಿದಲ್ಲಿ ಹತ್ತಿರದ ವೈದ್ಯರನ್ನು ಸಂಪರ್ಕಿಸಬೇಕು ಅಥವಾ 108/102ಗೆ ಕರೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ತಿಳಿಸಿದರು.

ಸಕ್ಕರೆಯುಕ್ತ ಪಾನೀಯ ಬೇಡ

ಬಿಸಿಲಿನ ತಾಪಮಾನ ಹೆಚ್ಚಾದ ಸಂದರ್ಭದಲ್ಲಿ ನೀರಿನ ಅಂಶವಿರುವ ತರಕಾರಿಗಳು ಹಾಗೂ ಹಣ್ಣುಗಳನ್ನು ಸೇವಿಸಬೇಕು. ಮನೆಯಿಂದ ಹೊರಹೋಗುವಾಗ ತಂಪು ಕನ್ನಡಕ, ಛತ್ರಿ, ಟವೆಲ್ ಅಥವಾ ಬಿಸಿಲಿನಿಂದ ಕಾಪಾಡಿಕೊಳ್ಳಲು ಸಾಮಾನ್ಯ ಕ್ರಮಗಳನ್ನು ಪಾಲಿಸಬೇಕು. ಹೆಚ್ಚು ಸಕ್ಕರೆಯುಕ್ತ ಪಾನೀಯಗಳು, ಕಾರ್ಬೋನೇಟೆಡ್ ಪಾನೀಯಗಳನ್ನು ಕುಡಿಯಬಾರದು. ಹೊರಾಂಗಣದಲ್ಲಿ ಕೆಲಸ ಮಾಡುವಾಗ ಆಗಾಗ್ಗೆ ವಿಶ್ರಾಂತಿ ಪಡೆಯಬೇಕು. ಪದೇ ಪದೇ ನೀರು ಕುಡಿಯಬೇಕು ಎಂದು ಜಿಲ್ಲಾ ಆರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸರಿತಾ ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net