

ಹಾವೇರಿ: ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಉತ್ಪನ್ನ ಖರೀದಿ ಕೇಂದ್ರವನ್ನು ಮೊದಲ ಹಂತದಲ್ಲಿ ಸವಣೂರ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ಹಾಗೂ ಮಾರ್ಗಸೂಚಿ ಅನ್ವಯ ಗುಣಮಟ್ಟದ ಹೆಸರುಕಾಳು ಖರೀದಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಬೇಡಿಕೆಗೆ ಅನುಗುಣವಾಗಿ ಖರೀದಿ ಕೇಂದ್ರವನ್ನು ಆರಂಭಿಸಬೇಕು ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಶಾಖಾ ವ್ಯವಸ್ಥಾಪಕರಿಗೆ ಸೂಚಿಸಿದರು.
ಸವಣೂರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲ್ಲಿ ತೆರೆಯಬೇಕು. ರೈತರಿಂದ ಖರೀದಿಸುವ ಹೆಸರುಕಾಳಿನ ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳು ಗುರುತಿಸಲು ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಸಿಬ್ಬಂದಿಯನ್ನು ಖರೀದಿ ಕೇಂದ್ರಗಳಿಗೆ ನಿಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿ ರೈತರಿಂದ ಹೆಸರುಕಾಳು ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ ಎರಡು ಕ್ವಿಂಟಲ್‌ನಂತೆ ಹಾಗೂ ಪ್ರತಿಯೊಬ್ಬ ರೈತರಿಂದ 10 ಕ್ವಿಂಟಲ್ ಖರೀದಿಗೆ ಅವಕಾಶವಿದೆ. ಹೆಸರುಕಾಳು ಖರೀದಿ ಮೊತ್ತವನ್ನು ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಯಾದ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಜಮೆ ಮಾಡಬೇಕು ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 585 ಹೆಕ್ಟೇರ್ ಪ್ರದೇಶದಲ್ಲಿ ಹೆಸರಕಾಳು ಬೆಳೆಯಲಾಗಿದೆ. ಸವಣೂರ ತಾಲೂಕಿನಲ್ಲಿ 420 ಹೆಕ್ಟೇರ್ ಹಾಗೂ ರಾಣೆಬೆನ್ನೂರ ತಾಲೂಕಿನಲ್ಲಿ 90 ಹೆಕ್ಟೇರ್ ಪ್ರದೇಶದಲ್ಲಿ ಹೆಸರುಕಾಳು ಬೆಳೆಯಲಾಗಿದೆ ಎಂದರು.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರು, ಜಂಟಿ ಕೃಷಿ ನಿರ್ದೇಶಕರು, ತೋಟಗಾರಿಕೆ ಇಲಾಖೆ ಉಪನಿರ್ದೇಶಕರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಕ್ವಿಂಟಲ್‌ಗೆ 8,682 ರೂ.
ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳು ಪ್ರತಿ ಕ್ವಿಂಟಲ್‌ಗೆ 8,682 ರೂ.ನಂತೆ ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ. ಆ.24ರಿಂದ 45 ದಿನಗಳವರೆಗೆ ರೈತರ ನೋಂದಣಿ ಆರಂಭಿಸಿ 90 ದಿನಗಳವರೆಗೆ ಖರೀದಿಸಬೇಕು. ಖರೀದಿ ಕೇಂದ್ರದ ಮುಂದೆ ಬ್ಯಾನರ್ ಅಳವಡಿಸಬೇಕು. ಕರಪತ್ರಗಳ ಮೂಲಕ ರೈತರಿಗೆ ಮಾಹಿತಿ ನೀಡಬೇಕೆಂದು ಡಿಸಿ ಸೂಚಿಸಿದರು.