ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಿಸಿ; ಬಣ್ಣಲೇಪಿತ ವಿಗ್ರಹಗಳನ್ನು ನದಿಮೂಲಗಳಲ್ಲಿ ವಿಸರ್ಜಿಸಬೇಡಿ; ಡಿಸಿ ಮನವಿ

20 Ganesha
Published on

ಹಾವೇರಿ: ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ರಾಜ್ಯದ ಯಾವುದೇ ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಿದೆ. ಸಾರ್ವಜನಿಕರು ಪರಿಸರ ಸ್ನೇಹಿ ಗೌರಿ- ಗಣೇಶ ಹಬ್ಬ ಆಚರಿಸುವ ಮೂಲಕ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬ ಸಮೀಪಿಸುತ್ತಿದೆ. ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳನ್ನು ಪ್ರತಿಷ್ಠಾಪಿಸದೇ ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಪೂಜಿಸಬೇಕು. ಪಿಒಪಿ ವಿಗ್ರಹಗಳನ್ನು ಕೆರೆ, ಬಾವಿ, ಇನ್ನಿತರೆ ಜಲಮೂಲಗಳಿಗೆ ವಿಸರ್ಜಿಸುವುದರಿಂದ ಜಲಮೂಲ ಕಲುಷಿತಗೊಳ್ಳುತ್ತದೆ. ಇದು ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯ ತಂದೊಡ್ಡುತ್ತದೆ. ಜನರ ಆರೋಗ್ಯಕ್ಕೂ ಧಕ್ಕೆ ಉಂಟು ಮಾಡುತ್ತದೆ. ಹಾಗಾಗಿ, ಈ ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು.
ಬಣ್ಣ ರಹಿತವಾದ ಮಣ್ಣಿನ ಮೂರ್ತಿಗಳನ್ನು ಸ್ಥಾಪಿಸಿ ನಗರಸಭೆ, ಪುರಸಭೆ ವತಿಯಿಂದ ನಿಗಧಿಪಡಿಸಿರುವ ಸ್ಥಳಗಳಲ್ಲಿ ಅಥವಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನದಲ್ಲಿ ಮೂರ್ತಿಗಳನ್ನು ವಿಸರ್ಜಿಸಬೇಕು. ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ಕಸ ಸಂಗ್ರಹಣ ವಾಹನಕ್ಕೆ ನೀಡಬೇಕು.
ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು. ಪೆಂಡಾಲ್‌ಗಳಲ್ಲಿ ಬಲೂನ್, ಬಲೂನ್‌ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್‌ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಐಸ್‌ಕ್ರೀಮ್ ಸ್ಟಿಕ್‌ಗಳು, ಅಲಂಕಾರಕ್ಕಾಗಿ ಬಳಸುವ ಪಾಲಿಸ್ಟೈರೀನ್ (ಥರ್ಮೊಕೋಲ್)ಗಳನ್ನು ಬಳಸಬಾರದು. ಈ ನಿಯಮಗಳ ಉಲ್ಲಂಘನೆಯು ಶಿಕ್ಷಾರ್ಹ ಅಪರಾಧವಾಗಿದ್ದು, ದಂಡವನ್ನು ಸಹ ಒಳಗೊಂಡಿರುತ್ತದೆ ಎಂದು ಡಿಸಿ ಎಚ್ಚರಿಸಿದ್ದಾರೆ.
ಮೈಕ್‌ಗೆ ಬೇಕು ಅನುಮತಿ
ಶಬ್ದ ಮಾಲಿನ್ಯ ನಿಯಮಗಳು 2000ರ ಅನ್ವಯ ಧ್ವನಿವರ್ಧಕ, ಸಾರ್ವಜನಿಕ ಗಣೇಶ ಪೆಂಡಾಲ್‌ಗಳಲ್ಲಿ ಬಳಸುವ ವಿದ್ಯುನ್ಮಾನ ಉಪಕರಣಗಳು ಮತ್ತು ಶಬ್ದ ಉಂಟು ಮಾಡುವ ಉಪಕರಣಗಳ ಬಳಕೆಗೆ ಕರ್ನಾಟಕ ಪೊಲೀಸ್ ಕಾಯ್ದೆ, 1963 ಅನ್ವಯ ಮತ್ತು ಪ್ರಸ್ತುತ ಚಾಲ್ತಿಯಲ್ಲಿರುವ ಸಂಬಂಧಿಸಿದ ಮಾರ್ಗಸೂಚಿಗಳನ್ವಯ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದಿದ್ದಾರೆ ಡಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net