

ಹಾವೇರಿ: ಲೋಕಸಭಾ ಚುನಾವಣೆ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಅತ್ಯಂತ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕು. ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆಗೆ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಂದಿನಿಂದಲೇ ಚುನಾವಣಾ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ಸೂಚನೆ ನೀಡಿದರು.
ದೇವಗಿರಿಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಹಾವೇರಿ-ಗದಗ ಜಿಲ್ಲಾಡಳಿತಗಳ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಅವರು ಮಾತನಾಡಿದರು.
ಹಾವೇರಿ ಲೋಕಸಭಾ ವ್ಯಾಪ್ತಿಗೆ ಬರುವ ಹಾವೇರಿ ಹಾಗೂ ಗದಗ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಸಿದ್ಧತೆ, ಸಮಿತಿಗಳ ರಚನೆ, ಮತಗಟ್ಟೆಗಳ ಸಿದ್ಧತೆ, ಚೆಕ್‌ಪೋಸ್ಟ್‌ಗಳ ಸ್ಥಾಪನೆ ಕುರಿತಂತೆ ಪರಸ್ಪರ ಮಾಹಿತಿಯನ್ನು ವಿನಿಮಯ ಮಾಡಿಕೊಂಡು, ಸಮನ್ವಯದಿಂದ ಕಾರ್ಯನಿರ್ವಹಿಸುವ ಕುರಿತಂತೆ ಸೂಚಿಸಿದರು.
ಹಾವೇರಿ ಲೋಕಸಭಾ ಕ್ಷೇತ್ರದ ಪೋಸ್ಟಲ್ ಬ್ಯಾಲೆಟ್, ಇವಿಎಂ ರ‌್ಯಾಂಡಮೈಜೇಶನ್, ಅಭ್ಯರ್ಥಿಗಳ ವಾಹನ ಪರವಾನಗಿ, ರ‌್ಯಾಲಿ ಮತ್ತು ಕಾರ್ಯಕ್ರಮಗಳಿಗೆ ಅನುಮತಿ, ಮಸ್ಟರಿಂಗ್, ಡಿ-ಮಸ್ಟರಿಂಗ್, ಸ್ಟ್ರಾಂಗ್‌ರೂಂ ಸ್ಥಾಪನೆ ಸೇರಿದಂತೆ ಗದಗ ಜಿಲ್ಲಾಧಿಕಾರಿಯವರಿಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಗದಗ ಜಿಲ್ಲೆಯಲ್ಲಿ ಕೈಗೊಂಡಿರುವ ಸಿದ್ಧತೆಗಳ ಕುರಿತಂತೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಅವರು ವಿಡಿಯೋ ಸಂವಾದದ ಮೂಲಕ ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ಸುರೇಖಾ ಉಪಸ್ಥಿತರಿದ್ದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಜಿ.ಪಂ.ಉಪಕಾರ್ಯದರ್ಶಿ ಎಸ್.ಜಿ.ಮುಳ್ಳಳ್ಳಿ, ಉಪ ವಿಭಾಗಾಧಿಕಾರಿಗಳಾದ ಚನ್ನಪ್ಪ, ಮಹ್ಮದ್ ಖಿಜರ್, ನೋಡಲ್ ಅಧಿಕಾರಿಗಳಾದ ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಎಚ್.ಉಮೇಶಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಮಮತಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಜಿಲ್ಲಾ ವಾರ್ತಾಧಿಕಾರಿ ಡಾ.ಬಿ.ಆರ್.ರಂಗನಾಥ, ಕೌಶಲಾಧಿಕಾರಿ ಹುಲಿರಾಜ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ನಗರಾಜ, ಮತ್ತಿತರರು ಪಾಲ್ಗೊಂಡಿದ್ದರು.
ನೀತಿ ಸಂಹಿತೆ ಅನುಷ್ಠಾನ:
ಮಾರ್ಚ್ 16ರಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಎಲ್ಲ ತರದ ರಾಜಕೀಯ ಪ್ರಚಾರ ಸಾಮಗ್ರಿಗಳು, ಪ್ರಚಾರ ಫಲಕಗಳನ್ನು ತೆರವುಗೊಳಿಸಬೇಕು. ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭದ ಫಲಕಗಳನ್ನು ಮರೆಮಾಚಬೇಕು. ಎಲ್ಲ ಎಆರ್‌ಒಗಳು ಜವಾಬ್ದಾರಿಯಿಂದ ತೆರವು ಕಾರ್ಯ ಕೈಗೊಳ್ಳಬೇಕು. ಇಂದಿನಿಂದಲೇ ಚೆಕ್‌ಪೋಸ್ಟ್ ಕರ್ತವ್ಯಕ್ಕೆ ಆವರ್ತ ಅನುಸಾರ ನಿಯೋಜಿತ ಅಧಿಕಾರಿ, ಸಿಬ್ಬಂದಿ ಹಾಜರಾಗಬೇಕು ಎಂದು ಡಿಸಿ ಸೂಚಿಸಿದರು.