

ಹಾವೇರಿ: ನ್ಯಾಯಮೂರ್ತಿ ಎಚ್.ಎನ್ ನಾಗಮೋಹನದಾಸ್ ಅವರ ಏಕ ವಿಚಾರಣಾ ಆಯೋಗ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣ-2025ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ಮೇ 5ರಿಂದ ಮೂರು ಹಂತದಲ್ಲಿ ಪರಿಶಿಷ್ಟ ಜಾತಿ ಸಮುದಾಯ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಸಮೀಕ್ಷೆ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಅಧ್ಯಕ್ಷ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.
ಇಲ್ಲಿನ ಇಜಾರಿ ಲಕಮಾಪುರದಲ್ಲಿ ಸೋಮವಾರ ಸಮೀಕ್ಷೆ ಕಾರ್ಯ ನಡೆಸುತ್ತಿದ್ದ ಸ್ಥಳಕ್ಕೆ ಭೋವಿ ಜನಾಂಗ ವಾಸಿಸುವ ಕಾಲನಿಗೆ ಭೇಟಿ ನೀಡಿ, ಪರಿಶೀಲಿಸಿ ನಂತರ ಮಾತನಾಡಿದರು. ಜಾತಿಗಣತಿ ಬಗ್ಗೆ ನಿಮಗೆ ಮಾಹಿತಿ ಇದೆಯಾ? ನೀವು ಯಾವ ಜಾತಿಗೆ ಸೇರಿದ್ದೀರಿ, ಈ ಹಿಂದೆ ಯಾವುದಾದರೂ ಮೀಸಲಾತಿ ಪಡೆದುಕೊಂಡಿದ್ದೀರಾ? ನಿಮ್ಮ ಬಳಿ ನಿಮ್ಮ ಜಾತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳ ದಾಖಲೆ ಇವೆಯಾ? ಎಂಬ ಮುಂತಾದ ವಿಷಯಗಳ ಕುರಿತು ಜನರಿಂದ ಮಾಹಿತಿ ಪಡೆದುಕೊಂಡರು.
ವಡ್ಡರ ಓಣಿ ಜನಸಂಖ್ಯೆ ಕುರಿತ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಂದ ಮಾಹಿತಿ ಪಡೆದುಕೊಂಡರು. ಪ್ರತಿಯೊಂದು ಮನೆಗೆ ಭೇಟಿ ನೀಡಿ, ಜಾತಿ ಗಣತಿ ಎಂದರೇನು ಎಂಬುದನ್ನು ಮೊದಲು ಮನದಟ್ಟು ಮಾಡಿ. ಅದರ ಪ್ರಯೋಜನ ಕುರಿತು ಮಾಹಿತಿ ನೀಡಿ. ನಂತರ ಅವರ ಕುಟುಂಬ ಸದಸ್ಯರ ಸಂಪೂರ್ಣ ಮಾಹಿತಿ ಪಡೆದು ವ್ಯವಸ್ಥಿತವಾಗಿ ಮೊಬೈಲ್ ಆ್ಯಪ್‌ನಲ್ಲಿ ದಾಖಲಿಸುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪ್ರಶಾಂತ ವರಗಪ್ಪನವರ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಆಂಜನೇಯ ಎಚ್.ಹುಲ್ಲಾಳ, ಇತರರು ಉಪಸ್ಥಿತರಿದ್ದರು.
ನಿಖರ ಮಾಹಿತಿ ನೀಡಿ:
ಗಣತಿ ಸಮಯದಲ್ಲಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸುತ್ತಿದ್ದಾರೆ. ಈ ಸಮಯದಲ್ಲಿ ಸಾರ್ವಜನಿಕರು ಗಣತಿದಾರರಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ (ರೇಷನ್ ಕಾರ್ಡ್) ಮೊಬೈಲ್ ನಂಬರ್ ಕಡ್ಡಾಯವಾಗಿ ನೀಡಬೇಕು. ನಿಖರ ಮಾಹಿತಿ ನೀಡಬೇಕು ಹಾಗೂ ತಪ್ಪು ಮಾಹಿತಿ ನೀಡಬಾರದು ಎಂದು ಡಿಸಿ ಸಲಹೆ ನೀಡಿದರು.