

ಹಾವೇರಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ವಿಶೇಷ ಅನುದಾನ ಅಪವ್ಯಯವಾಗದಂತೆ ಕಾಲ ಮಿತಿಯೊಳಗೆ ಅನುಷ್ಠಾನಗೊಳಿಸಬೇಕು. ಯಾವುದೇ ತೊಡಕುಗಳಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾರ್ಚ್ ಅಂತ್ಯದೊಳಗೆ ಪೂರ್ಣ ಪ್ರಮಾಣದಲ್ಲಿ ಅನುದಾನ ಬಳಕೆ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ 2022-23ನೇ ಸಾಲಿನ ವಿವಿಧ ಇಲಾಖೆಗಳು ಅನುಷ್ಠಾನ ಮಾಡಿದ ಎಸ್ಸಿ, ಎಸ್ಸಿಪಿ ಹಾಗೂ ಟಿ.ಎಸ್.ಪಿ. ಕಾರ್ಯಕ್ರಮಗಳ ಫೆಬ್ರವರಿ ಮಾಹೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದರು. ಕಾರಣವಿಲ್ಲದೆ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯವಹಿಸಿದರೆ ಕಾಯ್ದೆ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ನಗರ ಸ್ಥಳೀಯ ಸಂಸ್ಥೆಗಳು ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಕೇವಲ ಶೇ.30ರಷ್ಟು ಪ್ರಮಾಣದಲ್ಲಿ ಅನುದಾನ ಬಳಕೆಮಾಡಲಾಗಿದೆ. ನಿಗದಿತ ಅವಧಿಗೆ ಮುನ್ನ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು.
ಎಸ್ಸಿ, ಎಸ್‌ಇಪಿ ಹಾಗೂ ಟಿ.ಎಸ್.ಪಿ. ಯೋಜನೆಯಡಿ ಪ್ರಸಕ್ತ ವರ್ಷದಲ್ಲಿ 21,534.08 ಲಕ್ಷ ರೂ. ನಿಗಧಿಯಾಗಿದ್ದು, ಈವರೆಗೆ 15,516.95 ಲಕ್ಷ ರೂ. ಬಿಡುಗಡೆಯಾಗಿದೆ. ಈವರೆಗೆ 13,059.61 ಲಕ್ಷ ರೂ. ಖರ್ಚಾಗಿದೆ. ಫೆಬ್ರವರಿ ಮಾಹೆಯ ಅಂತ್ಯದವರೆಗೆ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಶೇ.84.16 ರಷ್ಟು ಸಾಧನೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೌಸರ್ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಉಪ ಕಾರ್ಯದರ್ಶಿ ಎಸ್.ಜಿ.ಮುಳ್ಳಳ್ಳಿ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಗೀತಾ, ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಾರಾಯಣರೆಡ್ಡಿ ಕನಕರೆಡ್ಡಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.