

ಹಾವೇರಿ: ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಆ.20ರಂದು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಡಿ.ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 9 ಗಂಟೆಗೆ ನಗರದ ಪುರಸಿದ್ದೇಶ್ವರ ದೇವಸ್ಥಾನ ಆವರಣದಿಂದ ಡಿ.ದೇವರಾಜ ಅರಸುರವರ ಭಾವಚಿತ್ರ ಮೆರವಣಿಗೆ ಹೊರಟು, ದೇವರಾಜ ಅರಸು ಭವನದವರೆಗೆ ತೆರಳಲಿದೆ. ಬೆಳಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸೂಚಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ ಕೆ.ಎನ್. ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರಬಂಧ, ರಸಪ್ರಶ್ನೆ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಲಾಗುವುದು. ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಹಿಂದುಳಿದ ವರ್ಗಗಳ ಎಲ್ಲ ವಿದ್ಯಾರ್ಥಿ ನಿಲಯಗಳಲ್ಲಿ ದಿನಾಚರಣೆ ಆಚರಿಸಿಸಲು ಸೂಚಿಸಲಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.