

ಹಾವೇರಿ: ಅಕ್ಟೋಬರ್ 2ರಂದು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರೀ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರ ಅಕ್ಟೋಬರ್ 2ರಂದು ನಡೆಯಲಿರುವ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರೀ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಾಂಧಿ ಜಯಂತಿ ಅಂಗವಾಗಿ ಈ ವರ್ಷ ಮೂರು ದಿನ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಸೆ.30ರಂದು ಜಿಲ್ಲಾಡಳಿತ ಭವನದ ಸಂಕಿರ್ಣದ ಆವರಣದಲ್ಲಿ ಸಾಮೂಹಿಕ ಸ್ವಚ್ಛತೆ ಹಾಗೂ ವಿವಿಧ ಕಚೇರಿಗಳ ಒಳ ಹಾಗೂ ಹೊರ ಆವರಣ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು. ಅಕ್ಟೋಬರ್ 1ರಂದು ನಗರದ ವಾರ್ಡ್‌ವಾರು ಸಾಮೂಹಿಕ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಪ್ರತಿ ವಾರ್ಡ್‌ಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು ಹಾಗೂ ಅಕ್ಟೋಬರ್ 2ರ ಗಾಂಧಿ ಜಯಂತಿ ದಿನ ಮುಂಜಾನೆ ಶ್ರಮದಾನ, ನಂತರ ಗಾಂಧಿ ವೃತ್ತದಲ್ಲಿರುವ ಮಹಾತ್ಮಗಾಂಧಿ ಪುತ್ಥಳಿಗೆ ಮಾಲಾರ್ಪಣೆ, ಸದ್ಭಾವನಾ ಯಾತ್ರೆ ಹಾಗೂ ವೇದಿಕೆ ಕಾರ್ಯಕ್ರಮ, ಸರ್ವಧರ್ಮ ಪ್ರಾರ್ಥನೆ, ಗಾಂಧಿ, ಶಾಸ್ತ್ರೀಜಿ ಅವರ ವಿಚಾರ ಧಾರೆ ಕುರಿತು ಉಪನ್ಯಾಸ, ಗಾಂಧಿ ಪ್ರೀಯ ಗೀತೆಗಳ ಗಾಯನ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಡೆಸುವ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ ವಿತರಣೆ, ಗಾಂಧಿ ಕಿರುಚಿತ್ರ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಜಿ.ಪಂ.ಉಪ ಕಾರ್ಯದರ್ಶಿ ಎಸ್.ಜಿ.ಮುಳ್ಳಳ್ಳಿ, ಉಪವಿಭಾಗಾಧಿಕಾರಿ ಚನ್ನಪ್ಪ, ಕೃಷಿ ಜಂಟಿ ನಿರ್ದೇಶಕ ಮಂಜುನಾಥ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಎಚ್.ಉಮೇಶಪ್ಪ, ಅಬಕಾರಿ ಇಲಾಖೆ ಉಪ ಆಯುಕ್ತೆ ಶೈಲಜಾ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಜಿಲ್ಲಾ ವಾರ್ತಾಧಿಕಾರಿ ಡಾ.ಬಿ.ಆರ್.ರಂಗನಾಥ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ತಿಮ್ಮೇಶ, ತಹಶೀಲ್ದಾರ್ ಜಿ.ಶಂಕರ, ಮತ್ತಿತರರ ಅಧಿಕಾರಿಗಳು ಉಪಸ್ಥಿತರಿದ್ದರು.