4ನೇ ಸುತ್ತಿನ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮ 26ರಿಂದ; ಜಾನುವಾರುಗಳಿಗೆ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ರೈತರಿಗೆ ಸಲಹೆ

20 HVR 8
Published on

ಹಾವೇರಿ: ಜಿಲ್ಲೆಯಲ್ಲಿ ಜಾನುವಾರುಗಳು ಸಾಂಕ್ರಾಮಿಕ ರೋಗಕ್ಕೆ ತುತ್ತಾಗದಂತೆ ಮುಂಜಾಗ್ರತಾ ಕ್ರಮವಾಗಿ ಇದೇ ಸೆ.26ರಿಂದ ಅಕ್ಟೋಬರ್ 25ರವರೆಗೆ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 4ನೇ ಸುತ್ತಿನ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲ ರೈತಾಪಿ ಜನ ಸಹಕರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಕಾಲುಬಾಯಿ ಬೇನೆ ಲಸಿಕೆ ಹಾಕಿಸಲು ಜಾನುವಾರು ಮಾಲೀಕರು ತಮ್ಮಲ್ಲಿರುವ ತಪ್ಪು ಕಲ್ಪನೆಗಳನ್ನು ಬದಿಗೊತ್ತಿ, ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವ ಮೂಲಕ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಮುಂದಾಗುವಂತೆ ತಿಳಿಸಿದರು.
ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮಕ್ಕೆ ಪಶು ಇಲಾಖೆಗೆ ಜತೆಗೆ ಹಾವೇರಿ ಹಾಲು ಒಕ್ಕೂಟ ವ್ಯಾಪ್ತಿಯ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳು ಸಮನ್ವಯದಿಂದ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ರೈತರಿಗೆ ಲಸಿಕಾ ಕಾರ್ಯಕ್ರಮದ ಬಗ್ಗೆ ವ್ಯಾಪಕವಾಗಿ ಪ್ರಚಾರ ಕೈಗೊಳ್ಳಬೇಕು ಎಂದು ಸೂಚಿಸಿದರು.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಎಸ್.ವಿ.ಸಂತಿ ಮಾತನಾಡಿ, ಪ್ರತಿ ತಾಲೂಕಿನಲ್ಲಿ ಲಸಿಕಾ ವೇಳಾ ಪಟ್ಟಿ ಮತ್ತು ಜಾನುವಾರು ಹೊಂದಿರುವ ರೈತರ ಮಾಹಿತಿಯನ್ನು ಗ್ರಾಮವಾರು ತಯಾರಿಸಲಾಗಿದೆ. ಗ್ರಾಮಗಳ ಹೆಸರು, ಜಾನುವಾರುಗಳ ಸಂಖ್ಯೆ, ಜಾನುವಾರು ಮಾಲೀಕರ ಹೆಸರು, ಮೊಬೈಲ್ ಸಂಖ್ಯೆ, ಆಧಾರ ಸಂಖ್ಯೆ, ಲಸಿಕಾದಾರರ ವಿವರ ಹಾಗೂ ಜಾನುವಾರುವಿನ ಕಿವಿ ಓಲೆ ಸಂಖ್ಯೆ ವಿವರಗಳು ಲಭ್ಯವಿರುತ್ತವೆ. ಪ್ರತಿ ಗ್ರಾಮ ಅಥವಾ ನಗರ ಪ್ರದೇಶವನ್ನು 100ರಿಂದ 120 ಜಾನುವಾರುಗಳಿಗೆ ಒಂದು ಬ್ಲಾಕ್ ಎಂದು ವರ್ಗೀಕರಿಸಿ ಒಟ್ಟು 3,112 ಬ್ಲಾಕ್‌ಗಳಲ್ಲಿ ಲಸಿಕಾದಾರರು ಲಸಿಕೆ ಹಾಕಲಿದ್ದಾರೆ. ಪ್ರತಿ ಜಾನುವಾರಿಗೆ ಒಂದರಂತೆ ಸೀರಿಂಜ್ ಉಪಯೋಗಿಸಿ ಲಸಿಕೆ ನೀಡಲಿದ್ದಾರೆ ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ವಿವಿಧ ಇಲಾಖೆಗಳ ಅಧಿಕಾರಿಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳು, ಹಾವೇರಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧಿಕಾರಿಗಳು, ಪಶು ಸಂಗೋಪನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿಗಳು (ತಾಂತ್ರಿಕ), ಎಲ್ಲ ತಾಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರು ಉಪಸ್ಥಿತರಿದ್ದರು.
144 ತಂಡ ರಚನೆ
ಜಿಲ್ಲೆಯಲ್ಲಿ ಅಂದಾಜು 3.06 ಲಕ್ಷ ಜಾನುವಾರುಗಳಿವೆ. 4ನೇ ಸುತ್ತಿನ ಲಸಿಕಾ ಅಭಿಯಾನದಲ್ಲಿ ಇಲಾಖೆಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಮನೆ ಬಾಗಿಲಿಗೆ ಹೋಗಿ ಕಾಲುಬಾಯಿ ಲಸಿಕೆ ಹಾಕಲಿದ್ದಾರೆ. ಪಶುಪಾಲನಾ ಇಲಾಖೆಯ ಹಾಗೂ ಇಲಾಖೇತರ ಲಸಿಕೆದಾರರನ್ನು ಒಳಗೊಂಡು ಇಬ್ಬರು ಲಸಿಕಾದಾರರಿರುವ ಒಟ್ಟು 144 ತಂಡಗಳನ್ನು ರಚಿಸಲಾಗಿರುತ್ತದೆ ಎಂದು ಡಾ.ಎಸ್.ವಿ.ಸಂತಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net