

ಹಾವೇರಿ: ವಿವಿಧ ಇಲಾಖೆ ಹಾಗೂ ಸಂಸ್ಥೆಗಳಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆ (ಎಸ್‌ಡಿಎ)ಗಳ ನೇಮಕಾತಿಗಾಗಿ ಅ.29 ರಂದು ಜಿಲ್ಲೆಯ 46 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಸಿಸಿಟಿವಿ ಕ್ಯಾಮರಾ ಕಣ್ಗಾವಲಲ್ಲಿ 16,165 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ತಿಳಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ದ್ವಿತೀಯ ದರ್ಜೆ ಸಹಾಯಕ ಹುದ್ದೆ (ಎಸ್‌ಡಿಎ) ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾ ಅಳವಡಿಕೆ ಹಾಗೂ ಗಡಿಯಾರ ಕಡ್ಡಾಯವಾಗಿದೆ. ಯಾವುದೇ ತಾಂತ್ರಿಕ ತೊಂದರೆಯಾಗದಂತೆ ನಿಗಾವಹಿಸಬೇಕು. ವಿದ್ಯುತ್ ವ್ಯತ್ಯಯವಾಗದಂತೆ ಹೆಸ್ಕಾಂ ಅಧಿಕಾರಿಗಳು ನೋಡಿಕೊಳ್ಳಬೇಕು. ಈ ಕುರಿತು ತಹಸೀಲ್ದಾರ್‌ಗಳು ಪರಿಶೀಲಿಸಬೇಕು ಎಂದು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಪೂಜಾರ ವೀವರಮಲ್ಲಪ್ಪ ಮಾತನಾಡಿ, ಪರೀಕ್ಷೆಗೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿ ಮಕ್ಕಳು ಅಥವಾ ಸಂಬಂಧಿಕರು ಪರೀಕ್ಷೆ ಬರೆಯುತ್ತಿರಬಾರದು. ಈ ಬಗ್ಗೆ ಪರಿಶೀಲಿಸಿ. ಪರೀಕ್ಷೆಗೆ ನಿಯೋಜಿತ ಮೇಲ್ವಿಚಾರಕರು ಸಮಯಕ್ಕೆ ಸರಿಯಾಗಿ ಹಾಜರಾಗಬೇಕು. ಲಾಟರಿ ಮೂಲಕ ಕೊಠಡಿ ಮೇಲ್ವಿಚಾರಕರ ನೇಮಿಸಬೇಕು. ಪ್ರಶ್ನೆಪತ್ರಿಕೆ ತೆರೆಯುವಾಗ ಹಾಗೂ ಉತ್ತರ ಪತ್ರಿಕೆ ಬಂಡಲ್ ಮಾಡುವಾಗ ಸಿಸಿಟಿವಿ ವೀಕ್ಷಣೆಯ ಅಡಿಯಲ್ಲೇ ಕೈಗೊಳ್ಳುವಂತೆ ಸೂಚನೆ ನೀಡಿದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಉಮೇಶಪ್ಪ ಮಾತನಾಡಿ, ಖಜಾನೆಯಿಂದ ಪ್ರಶ್ನೆಪತ್ರಿಕೆ ಕೊಂಡೊಯ್ಯಲು ತ್ರಿಸದಸ್ಯರ ಸಮಿತಿ ರಚಿಸಲಾಗಿದೆ. ಇವರ ಉಸ್ತುವಾರಿಯಲ್ಲಿ ಪ್ರಶ್ನೆಪತ್ರಿಕೆಯನ್ನು ಪೊಲೀಸ್ ಬೆಂಗಾವಲಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ರವಾನಿಸಲಾಗುವುದು. ಸುಗಮವಾಗಿ ಪರೀಕ್ಷೆ ನಡೆಸಲು ಪ್ರೌಢಶಾಲೆ ಮತ್ತು ಪದವಿ ಕಾಲೇಜುಗಳ ಕೊಠಡಿಗಳನ್ನು ಹಾಗೂ ಶಿಕ್ಷಕರನ್ನು ಅವಶ್ಯಕ್ಕೆ ತಕ್ಕಂತೆ ನಿಯೋಜಿಸಬೇಕು. ಜಿಲ್ಲಾ ಖಜಾನೆಯಲ್ಲಿ ಪರೀಕ್ಷಾ ಕರ್ತತ್ಯಕ್ಕೆ ನಿಯೋಜಿಸುವ ಮಾರ್ಗಾಧಿಕಾರಿ ಬಯೋಮೆಟ್ರಿಕ್ ಮಾಡಿಸಬೇಕು ಎಂದು ತಿಳಿಸಿದರು.
ನಿಷೇಧ: 46 ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‌ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿ, ಝರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಿಸಲು ಆದೇಶಿಸಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ತಹಸೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಿಡಿಪಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಾಚಾರ್ಯರು ಉಪಸ್ಥಿತರಿದ್ದರು.
ಇಲೆಕ್ಟ್ರಾನಿಕ್ ಉಪಕರಣಗಳ ನಿಷೇಧ
ಪರೀಕ್ಷಾ ಕೇಂದ್ರಗಳಲ್ಲಿ ಇಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಪೇಜರ್, ವೈರಲೆಸ್ ಸೆಟ್, ಲಾಗ್ ಲೇಬಲ್, ಕ್ಯಾಲಕ್ಯುಲೇಟರ್ ಹಾಗೂ ರಿಸ್ಟ್ ವಾಚ್‌ಗಳನ್ನು ಪರೀಕ್ಷಾರ್ಥಿಗಳು ಹಾಗೂ ಕೊಠಡಿ ಮೇಲ್ವಿಚಾರಕರು ತರುವುದನ್ನು ನಿಷೇಧಿಸಲಾಗಿದೆ. ಉದ್ದ ತೋಳಿನ ಉಡುಪು, ಜೀನ್ಸ್ , ಮಾಸ್ಕ್, ಶೂ ಧರಿಸಿ ಬರುವಂತಿಲ್ಲ. ಮಂಗಳಸೂತ್ರ ಮತ್ತು ಮೂಗುತಿ ಹೊರತುಪಡಿಸಿ ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ ಎಂದು ಡಿಸಿ ತಿಳಿಸಿದರು.