ಐದು ಕೋಟಿ ವೃಕ್ಷ ನೆಡುವ ವನಮಹೋತ್ಸವಕ್ಕೆ ಸಜ್ಜಾಗಿ; ಜಿಲ್ಲಾಧಿಕಾರಿ

23 HVR 4
Published on

ಹಾವೇರಿ: ರಾಜ್ಯದಲ್ಲಿ ಐದು ಕೋಟಿ ಸಸಿ ನೆಡುವ ಬೃಹತ್ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯಲ್ಲಿ ಇಲಾಖಾವಾರು ಶಾಲಾ-ಕಾಲೇಜುಗಳಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಕುರಿತಂತೆ ಇಲಾಖಾವಾರು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರ ವನಮಹೋತ್ಸವ ಹಿನ್ನೆಲೆಯಲ್ಲಿ ಸಭೆ ನಡೆಸಿದ ಅವರು, ಪ್ರಸಕ್ತ ಮಳೆಗಾಲದಲ್ಲಿ ಸಾರ್ವಜನಿಕರು, ಸಂಘ-ಸಂಸ್ಥೆಗಳು, ವಿವಿಧ ಶೈಕ್ಷಣಿಕ ಸಂಸ್ಥೆಗಳು ಹಾಗೂ ರೈತರ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮಗಳನ್ನು ಆಂದೋಲನದ ಮಾದರಿಯಲ್ಲಿ ಆಯೋಜಿಸಿ ಯಶಸ್ವಿಗೊಳಿಸಬೇಕು ಎಂದು ಸಲಹೆ ನೀಡಿದರು.
ಅರಣ್ಯ ಪ್ರದೇಶದಲ್ಲಿನ ಖಾಲಿ ಸ್ಥಳಗಳು, ಅರಣ್ಯೇತರ ಸರ್ಕಾರಿ ಸ್ಥಳಗಳು, ರಸ್ತೆ ಬದಿಗಳು, ಶೈಕ್ಷಣಿಕ ಸಂಸ್ಥೆಗಳ ಆವರಣ, ಆಸ್ಪತ್ರೆಗಳು, ಕೈಗಾರಿಕಾ ಪ್ರದೇಶಗಳು, ಧಾರ್ಮಿಕ ಸಂಘ-ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಸರ್ಕಾರಿ ಇಲಾಖೆಗಳ ಆವರಣ, ರೈತರ ಜಮೀನುಗಳು ಮತ್ತು ಜಮೀನುಗಳ ಬದುಗಳು ಹಾಗೂ ಕೆರೆ ಅಂಗಳಗಳು ಇತ್ಯಾದಿ ಪ್ರದೇಶಗಳಲ್ಲಿ ಸ್ಥಳೀಯ ಜಾತಿಯ ಮರ ಗಿಡಗಳನ್ನು ಬೆಳೆಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ನಾಳೆ ಸಂಜೆಯೊಳಗಾಗಿ ಇಲಾಖಾವಾರು ವ್ಯಾಪ್ತಿಯ ವಿದ್ಯಾರ್ಥಿ ನಿಲಯ, ಶೈಕ್ಷಣಿಕ ಸಂಸ್ಥೆಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಸಸಿಗಳ ಬೇಡಿಕೆಗಳ ಕುರಿತಂತೆ ಮಾಹಿತಿ ಸಲ್ಲಿಸಲು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ ಗುಣಾರೆ, ಡಿ.ಎಫ್.ಒ ಬಾಲಕೃಷ್ಣ, ಜಿ.ಪಂ. ಉಪ ಕಾರ್ಯದರ್ಶಿ ಎಸ್.ಜಿ.ಮುಳ್ಳಳ್ಳಿ, ಉಪವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ಅಬಕಾರಿ ಇಲಾಖೆ ಉಪ ಆಯುಕ್ತೆ ಶೈಲಜಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ವಿನಾಯಕ ಜೋಶಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂಬಾಬಾ ಮುದ್ದೇಬಿಹಾಳ, ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net