

ಹಾವೇರಿ: ಭಾರತಿಯ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮುಂದಿನ 3 ದಿನಗಳಲ್ಲಿ ಜೂ.15ರವರೆಗೆ ಜಿಲ್ಲೆ ಒಳಗೊಂಡಂತೆ ರಾಜ್ಯದ ಉತ್ತರ ಒಳನಾಡು ಭಾಗದಲ್ಲಿ ಗುಡಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತ ಕ್ರಮವಾಗಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಈ ಕೆಳಕಂಡ ಸೂಚನೆಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.
ಸಾರ್ವಜನಿಕರು, ಮಕ್ಕಳು ಮಳೆ ಗಾಳಿ, ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೇ ಮನೆ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಹೊರಗಿನ ಕೃಷಿ ಚಟುವಟಿಕೆಗಳಿಂದ ದೂರವಿರಬೇಕು. ನದಿ, ಕೆರೆ, ಹಳ್ಳಗಳಲ್ಲಿ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳ ಹತ್ತಿರ ಹೋಗಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರ ಇರಬೇಕು. ದುರ್ಬಲವಾದ, ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ, ಮರಗಳ ಕೆಳಗೆ ನಿಲ್ಲಬಾರದು. ಕಟ್ಟಡಗಳ ಮೇಲೆ ಅಪಾಯಕಾರಿ ಹಾಗೂ ದುರ್ಬಲವಾದ ರೆಂಬೆ-ಕೊಂಬೆಗಳಿದ್ದಲ್ಲಿ ಮೊದಲೇ ಕತ್ತರಿಸಿ ವಾಸಿಸುವ ಕಟ್ಟಡಗಳನ್ನು ರಕ್ಷಿಸಿಕೊಳ್ಳಬೇಕು.
ಹೆಚ್ಚು ಮಳೆಯಾಗುವದರಿಂದ ಕೆಲವು ಪ್ರದೇಶಗಳು ಜಲಾವೃತಗೊಳ್ಳುವ ಸಂಭವ ಹೆಚ್ಚಾಗಿರುತ್ತದೆ. ಹಾಗಾಗಿ, ಇಂತಹ ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ತಹಸೀಲ್ದಾರರ ಕಚೇರಿ ಅಥವಾ ಗ್ರಾಮ ಪಂಚಾಯಿತಿ ಸಿಬ್ಬಂದಿ ಸಂಪರ್ಕಿಸಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಮುಂಚಿತವಾಗಿಯೇ ಉಳಿಯಬಹುದು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ನಿಭಾಯಿಸಬೇಕು ಎಂದು ಡಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
1077ಗೆ ಕರೆ ಮಾಡಿ
ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಜಿಲ್ಲಾ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ.ಗೆ ಕರೆ ಮಾಡಬಹುದು. ತುರ್ತು ಸೇವೆಗೆ ಶುಲ್ಕ ರಹಿತ 1077 ಹಾಗೂ ದೂ.ಸಂ. 08375-249102 ಸಂಪರ್ಕಿಸಬಹುದು.