

ಹಾವೇರಿ: ಜಿಲ್ಲಾಡಳಿತದ ವತಿಯಿಂದ ಜ.26ರಂದು ಆಯೋಜಿಸುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯ, ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮ ನಡೆಯಲಿರುವ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದ ಸ್ವಚ್ಛತೆ, ವೇದಿಕೆ ಅಲಂಕಾರ, ಕುಡಿಯುವ ನೀರು ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ತೋಟಗಾರಿಕೆ ಇಲಾಖೆ, ನಗರಸಭೆ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸರ್ಕಾರಿ ಕಚೇರಿಗಳು, ನಗರದ ವೃತ್ತಗಳಿಗೆ ದೀಪಾಲಂಕಾರ ಮಾಡಿ. ಶಿಷ್ಟಾಚಾರ ಅನುಸಾರ ಆಮಂತ್ರಣ ಪತ್ರಿಕೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ನಾಗರಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಬೇಕು. ಯಾವುದೇ ಲೋಪ ಆಗದಂತೆ ಶಿಸ್ತುಬದ್ಧವಾಗಿ ಆಯೋಜಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಉಪವಿಭಾಗಾಧಿಕಾರಿ ಎಚ್.ಬಿ.ಚನ್ನಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಜಿಲ್ಲಾ ಯೋಜನಾಧಿಕಾರಿ ಮಮತಾ ಹೊಸಗೌಡ್ರ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಎಚ್.ಉಮೇಶಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ಅಬಕಾರಿ ಇಲಾಖೆ ಉಪ ಆಯುಕ್ತೆ ಶೈಲಜಾ, ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ, ತಹಸೀಲ್ದಾರ್ ಶರಣಮ್ಮ , ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.