ಹಾವೇರಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದ ಕುಂದು-ಕೊರತೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದ ಕುಂದು-ಕೊರತೆ ನಿವಾರಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವೈಯಕ್ತಿಕ ಹಾಗೂ ಸಾಮಾಜಿಕ ಸಮಸ್ಯೆಗಳನ್ನು ಪರಿಶೀಲನೆ ನಡೆಸಲಾಗುವುದು. ಕೆಲವು ಹಣಕಾಸು ವ್ಯಾಪ್ತಿಗೆ, ಕೆಲವು ಕಾನೂನು ವ್ಯಾಪ್ತಿಗೆ ಬರುತ್ತವೆ. ನನ್ನ ವ್ಯಾಪ್ತಿಗೆ ಬರುವ ಎಲ್ಲ ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸಲಾಗುವುದು ಎಂದು ತಿಳಿಸಿದರು.
ತಳಮಟ್ಟದಲ್ಲೇ ಸಮಸ್ಯೆಗಳ ಪರಿಹಾರಕ್ಕೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಇರುವ ಸರ್ಕಾರದ ಯೋಜನೆಗಳ ಕುರಿತು ಅರಿವು ಮೂಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.
ಆಡಳಿತ ಜನರಿಗೆ ಹತ್ತಿರವಾದರೆ ನಿಮಗೆ ಆತ್ಮಸ್ಥೈರ್ಯ ಹೆಚ್ಚಾಗುತ್ತದೆ. ಆ ಹಿನ್ನೆಲೆಯಲ್ಲಿ ಈ ಕುಂದುಕೊರತೆ ಸಭೆ ಆಯೋಜಿಸಲಾಗಿದೆ. ನಾನು ನಿರಂತರವಾಗಿ ನಿಮ್ಮ ಸಂಪರ್ಕದಲ್ಲಿರುತ್ತೇನೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದಯಕ್ಕೆ ಮೀಸಲಾದ ಯೋಜನೆ ಹಾಗೂ ಅನುದಾನ ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಾಲ್, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್., ಜಿ.ಪಂ. ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಉಪ ವಿಭಾಗಾಧಿಕಾರಿ ಎಚ್.ಬಿ ಚನ್ನಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.
ಕುಂದುಕೊರತೆಗಳ ಮಹಾಪೂರ
ಶಿಗ್ಗಾಂವಿ ನಗರದ ಅಂಬೇಡ್ಕರ್ ನಗರದಲ್ಲಿ ಮಾರ್ಗಸೂಚಿ ಅನುಸಾರ ಅಂಗನವಾಡಿ ಕಾರ್ಯಕರ್ತೆಯರ ಆಯ್ಕೆ ಮಾಡಿಲ್ಲ. ರಾಣೆಬೆನ್ನೂರ ನಗರದ ಅಂಬೇಡ್ಕರ್ ಭವನ ದುರಸ್ತಿ ಹಾಗೂ ಹಾವೇರಿ ನಗರದ ಮಹರ್ಷಿ ವಾಲ್ಮೀಕಿ ಭವನ ದುರಸ್ತಿ, ದಲಿತರಿಗೆ ಸ್ಮಶಾನ ಭೂಮಿ ಮಂಜೂರು, ಗ್ರಾಮ ಪಂಚಾಯಿತಿ ಕರ ವಸೂಲಿಯಲ್ಲಿ ಶೇ.25.7 ಹಣ ಸದ್ಬಳಕೆಯಾಗುತ್ತಿಲ್ಲ, ವಿವಿಧ ನಿಗಮಗಳಿಂದ ವಿವಿಧ ಯೋಜನೆಗಳಡಿ ಬ್ಯಾಂಕ್‌ಗಳಲ್ಲಿ ಸಾಲ ಹಾಗೂ ಸಹಾಯಧನ ಸಿಗುತ್ತಿಲ್ಲ, ಹಾವೇರಿ ನಗರದ ಅಂಬೇಡ್ಕರ್ ನಗರಕ್ಕೆ 25 ದಿನಕ್ಕೊಮ್ಮೆ ನೀರು ಬರುತ್ತದೆ. ಹಾಗಾಗಿ, ಒಂದು ಕೊಳವೆಬಾವಿ ಕೊರೆಸುವಂತೆ ಸಮಾಜದ ಪ್ರಮುಖರು ಸಭೆಯಲ್ಲಿ ಮನವಿ ಸಲ್ಲಿಸಿದರು.
ಬಂಕಾಪುರದಲ್ಲಿ ಸರ್ಕಾರದಿಂದ ದಲಿತರಿಗೆ ನೀಡಿದ ಇನಾಂ ಹಾಗೂ ಚಾಕರಿ ಜಮೀನು ಬೇರೆಯವರು ಉಳುಮೆ ಮಾಡುತ್ತಿರುವ ಕುರಿತು, ಹೊರಗುತ್ತಿಗೆ ನೇಮಕಾತಿಯಲ್ಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಆದ್ಯತೆ ನೀಡಲು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನೌಕರರಿಗೆ ಮುಂಬಡ್ತಿ ವಿಳಂಬ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದ ಕಾಲನಿಯಲ್ಲಿ ಹೈಮಾಸ್ಟ್ ದೀಪಗಳ ಅಳವಡಿಕೆ, ನಕಲಿ ಜಾತಿ ಪ್ರಮಾಣಪತ್ರ ಹಾವಳಿ ತಡೆಗೆ, ಅಟ್ಟ್ರಾಸಿಟಿ ಪ್ರಕರಣಗಳಲ್ಲಿ ಪೊಲೀಸರು ಸರಿಯಾಗಿ ಸ್ಪಂದಿಸದ ಕುರಿತು ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಬೇಡಿಕೆ ಸಲ್ಲಿಸಿದರು.