ಪರಿಶಿಷ್ಟರ ದೌರ್ಜನ್ಯ, ಮದ್ಯವರ್ತಿಗಳಿಗೆ ಅವಕಾಶ ಬೇಡ; ಆಯಾ ಸಾಲಿನ ಅನುದಾನ ಅಂದೇ ಖರ್ಚು ಮಾಡಬೇಕು; ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ

1 HVR 3
Published on

ಹಾವೇರಿ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ಪ್ರಕರಣಗಳು ಶೂನ್ಯವಾಗಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ಠಾಣೆಗಳಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು. ಪ್ರಕರಣದ ಸತ್ಯಾಸತ್ಯತೆ ತಿಳಿದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.

ಇಲ್ಲಿನ ದೇವಗಿರಿ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚು ಕಂಡುಬರುವ ಪ್ರದೇಶಗಳ ಜಾಗೃತಿ ಮೂಡಿಸಬೇಕು. ಸರ್ಕಾರದ ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಯೋಜನೆಗೆ ಮೀಸಲಾದ ಅನುದಾನ ಆಯಾ ಸಾಲಿನಲ್ಲೇ ವೆಚ್ಚವಾಗಬೇಕು ಹಾಗೂ ಅರ್ಹ ಫಲಾನುಭವಿಗಳೀಗೆ ತಲುಬೇಕು. ದೇವಗಿರಿ ಗ್ರಾಮದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಕಾಲನಿಯ ಮನೆಗಳಲ್ಲಿ ಸಾರಾಯಿ ಮಾರಾಟವಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ದೇವಗಿರಿ ಗ್ರಾಮದ ವಾಲ್ಮೀಕಿ ಸಮುದಾಯದ ಸ್ಮಶಾನಕ್ಕೆ ತಡೆಗೋಡೆ ನಿರ್ಮಾಣ ಮಾಡಬೇಕು. ಬಾಳಂಬೀಡ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ 14-15ನೇ ಹಣಕಾಸು ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಕಾಲನಿಯಲ್ಲಿ ಯಾವುದೇ ಕೆಲಸ ಮಾಡುತ್ತಿಲ್ಲ. ಅಲ್ಲಿ ಪಕ್ಕಾ ಚರಂಡಿ, ಹೈಮಾಸ್ಟ್ ದೀಪ ಅಳವಡಿಸಿ.

ಹಾನಗಲ್ಲ ತಾಲೂಕು ಆರೆಲಕ್ಮಾಪೂರ ಗ್ರಾಮದಲ್ಲಿ ಮಹಾತಂಗೇಶ್ವರ ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಅನ್ಯ ಧರ್ಮೀಯರು ಮನೆ ಕಟ್ಟಿಕೊಂಡಿದ್ದಾರೆ. ಅವರನ್ನು ತೆರವುಗೊಳಿಸಬೇಕು. ನೆಗಳೂರು ಗ್ರಾಮದಲ್ಲಿ 350 ದಲಿತರ ಮನೆಗಳಿದ್ದು, ಅವರಿಗೆ ಇ-ಸ್ವತ್ತು ಉತಾರ ಇಲ್ಲ. ಅವರಿಗೆ ಇ-ಸ್ವತ್ತು ಉತಾರ ವಿತರಿಸಿ ಎಂದು ನೂತನ ಸಮಿತಿಯ ಅಧಿಕಾರೇತರ ನಾಮನಿರ್ದೇಶಿತ ಸದಸ್ಯರಾದ ಶಿವರಾಜ ಹರಿಜನ, ಸಂಜಯಗಾಂಧಿ ಸಂಜೀವಣ್ಣವರ, ಬಸವರಾಜ ಹೆಡಿಗ್ಗೊಂಡ, ಎನ್.ಎಂ.ಗಾಳೆಮ್ಮನವರ, ಜಗದೀಶ ಹರಿಜನ ಡಿಸಿಗೆ ಮನವಿ ಮಾಡಿಕೊಂಡರು.

ಈ ಎಲ್ಲ ಸಮಸ್ಯೆಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಆದ್ಯತೆ ಮೇರೆಗೆ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಡಿಸಿ ಸೂಚನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಮಾತನಾಡಿ, ಜನವರಿ-2025ರಿಂದ ಈವರೆಗೆ 43 ಪ್ರಕರಣಗಳು ದಾಖಲಾಗಿದ್ದು, ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟ 7 ಜನರ ಅವಲಂಬಿತರಿಗೆ 1,23,363 ರೂ. ಪಿಂಚಣಿ ಮಂಜೂರು ಮಾಡಲಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ, ಸಮಿತಿಯ ಅಧಿಕಾರೇತರ ನಾಮನಿರ್ದೇಶಿತ ಸದಸ್ಯ ಅಜ್ಜಪ್ಪ ಗೋಣೆಮ್ಮನವರ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಾ.ಪಂ. ಇಒಗಳು, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು, ಇತರರು ಉಪಸ್ಥಿತರಿದ್ದರು.

ಅಂದಲಗಿಯಲ್ಲಿ ನಿವೇಶನ ಹಂಚಿ

ಅಂದಲಗಿ ಗ್ರಾಮ ಪಂಚಾಯತಿಯ ಗಾಂವಠಾಣ ವ್ಯಾಪ್ತಿಯಲ್ಲಿ ಲಭ್ಯವಿರುವ 19 ಎಕರೆ ಪ್ರದೇಶದಲ್ಲಿ ಪರಿಶಿಷ್ಟ ಜಾತಿಯ ನಿವೇಶನ ರಹಿತರಿಗೆ ಕಾನೂನಾತ್ಮಕವಾಗಿ ಹಂಚಿಕೆಗೆ ಕ್ರಮ ವಹಿಸಬೇಕು. ಕೂಡಲೇ ಕ್ರಿಯಾಯೋಜನೆ ತಯಾರಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.

ನಾಲ್ಕು ಜನರಿಗೆ ನೌಕರಿ

ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟ 7 ಜನರ ಅವಲಂಬಿತರ ಪೈಕಿ ಈಗಾಗಲೇ ನಾಲ್ಕು ಜನರಿಗೆ ಸರ್ಕಾರಿ ಕೆಲಸ ನೀಡಲಾಗಿದೆ. ಒಂದು ಪ್ರಕರಣ ಬೇರೆ ಜಿಲ್ಲೆಗೆ ವರ್ಗಾವಣೆಯಾಗಿದೆ. ಉಳಿದ ಎರಡು ಪ್ರಕರಣದಲ್ಲಿ ಪತ್ನಿಯರು ಅಪರಾಧಿಗಳಾಗಿದ್ದಾರೆ ಎಂದು ಡಿಸಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net