ಹಾವೇರಿ: ಜಿಲ್ಲಾಡಳಿತ, ಕೌಶಲಾಭಿವೃದ್ಧಿ, ಉದ್ಯಮಶೀಲೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ ಮಿಷನ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ಫೆ.5ರಂದು ಬೆಳಗ್ಗೆ 11 ಗಂಟೆಗೆ ನಗರದ ಹುಕ್ಕೇರಿಮಠದ ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಹುಕ್ಕೇರಿಮಠದ ಶ್ರೀ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸುವರು. ಶಾಸಕ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸುವರು. ಸ್ಥಳೀಯ ಶಾಸಕರು, ನಗರಸಭೆ ಅಧ್ಯಕ್ಷರು, ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.
42 ಉದ್ಯೋಗದಾತ ಕಂಪನಿಗಳ ನೋಂದಣಿ :
ಉದ್ಯೋಗ ಮೇಳದಲ್ಲಿ ಭಾಗವಹಿಸಲು ಈಗಾಗಲೇ 750 ಉದ್ಯೋಗಾಕಾಂಕ್ಷಿಗಳು ಹಾಗೂ 42 ಉದ್ಯೋಗದಾತ ಕಂಪನಿಗಳು ನೋಂದಣಿ ಮಾಡಿಕೊಂಡಿವೆ.
ಸ್ಥಳೀಯ ಕೈಗಾರಿಕೆಗಳು ಬೆಂಗಳೂರು, ಧಾರವಾಡ, ಕೋಲಾರ, ತುಮಕೂರು, ಶಿರಸಿ ಹಾಗೂ ಇತರೆ ಜಿಲ್ಲೆಗಳಿಂದ ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಈ ನಿಟ್ಟಿನಲ್ಲಿ ಉದ್ಯೋಗದಾತರು ಹಾಗೂ ಉದ್ಯೋಗಾಕಾಂಕ್ಷಿಗಳು ನೋಂದಣಿಗಾಗಿ https://haverijobfair.com ವೆಬ್‌ಸೈಟ್ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.