

ಹಾವೇರಿ: ತರಗತಿಯಲ್ಲಿ ವಿವಿಧ ಮನಸ್ಥಿತಿಯ ಮಕ್ಕಳಿರುತ್ತಾರೆ. ಅವರನ್ನು ಸೂಕ್ಷ್ಮವಾಗಿ ಗಮನಿಸಬೇಕು. ಅವರ ಸಮಸ್ಯೆಗಳನ್ನು ತಿಳಿದುಕೊಂಡು ಸಂಬಂಧಪಟ್ಟವರ ಗಮನಕ್ಕೆ ತಂದು ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಜರುಗಿಸಬೇಕು. ಕಲಿಕೆಯಲ್ಲಿ ಮುಂದಿರುವ ಮಕ್ಕಳಿಗೆ ನೀಡುವ ಪ್ರಾಮುಖ್ಯತೆಯಷ್ಟೇ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೂ ನೀಡಬೇಕು ಹಾಗೂ ಆತ್ಮಸ್ಥೈರ್ಯ ತುಂಬಬೇಕು ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಸಹಯೋಗದಲ್ಲಿ ಜಿಲ್ಲೆಯ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಹಾಗೂ ವಸತಿ ಶಾಲೆ ಮತ್ತು ವಸತಿ ನಿಲಯಗಳ ವಾರ್ಡನ್‌ಗಳಿಗೆ ಆಯೋಜಿಸಿದ್ದ ಮಾನಸಿಕ ಆರೋಗ್ಯ ಅರಿವು ಹಾಗೂ ವಿವಿಧ ಸಾಂಕ್ರಾಮಿಕ ರೋಗಗಳ ಕುರಿತ ಅರಿವು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಮಾತನಾಡಿ, ಶಾಲಾ-ಕಾಲೇಜುಗಳ 100 ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಬಾರದು. ಇಂತಹ ಪ್ರಕರಣಗಳು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಬೇಕು. ವಾರದೊಳಗಾಗಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಮನೋವೈದ್ಯ ಡಾ.ವಿಜಯಕುಮಾರ ಬಳಿಗಾರ ಮಾನಸಿಕ ಖಾಯಿಲೆಗಳ ಲಕ್ಷಣ, ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸರಿತಾ ಸಾಂಕ್ರಾಮಿಗಳ ಹರಡುವಿಕೆ ಹಾಗೂ ನಿಯಂತ್ರಣ ಕ್ರಮಗಳ ಬಗ್ಗೆ ತಿಳಿಸಿದರು. ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ನೀಲೇಶ ಎಂ.ಎನ್. ಟಿ.ಬಿ.ರೋಗದ ಲಕ್ಷಣ ಹಾಗೂ ಚಿಕಿತ್ಸೆ ಬಗ್ಗೆ ವಿವರಿಸಿದರು. ಲೈಂಗಿಕ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಸಂಸ್ಥೆ ಅಧ್ಯಕ್ಷರಾದ ಕೆ.ಸಿ.ಅಕ್ಷತಾ ಟ್ರಾನ್ಸ್ ಜೆಂಡರ್ ಬಗ್ಗೆ ವಿವರಿಸಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಮುತ್ತುರಾಜ ಮಾದರ ಮಕ್ಕಳ ಹಕ್ಕುಗಳ ಬಗ್ಗೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.
ಜಿಪಂ ಸಿಇಒ ಅಕ್ಷಯ ಶ್ರೀಧರ ಮಾರ್ಗದರ್ಶನದಲ್ಲಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಇಂತಹ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯ ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ವಸತಿ ಶಾಲೆ ಹಾಗೂ ವಸತಿ ನಿಲಯಗಳ ವಾರ್ಡನ್‌ಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್. ರಾಘವೇಂದ್ರಸ್ವಾಮಿ, ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಬಿ.ಎಸ್. ಜಗದೀಶ್ವರ, ಡಾ.ಚನ್ನಬಸಯ್ಯ ವಿರಕ್ತಮಠ, ಉಪಸ್ಥಿತರಿದ್ದರು.