

ಹಾವೇರಿ: ಶಾಲಾ ಶಿಕ್ಷಣ ಇಲಾಖೆ ಹಾವೇರಿ ಹಾಗೂ ಕನ್ನಡದ ನಂಬರ್ ಒನ್ ದಿನಪತ್ರಿಕೆ ‘ವಿಜಯವಾಣಿ’ ಸಹಯೋಗದಲ್ಲಿ ಎಸ್‌ಎಸ್‌ಎಲ್‌ಸಿ ಮಕ್ಕಳನ್ನು ಪರೀಕ್ಷೆಗೆ ಸಜ್ಜಾಗಿಸಲು ಮಾ.13ರಂದು ಬೆಳಗ್ಗೆ 10 ಗಂಟೆಗೆ ನಗರದ ಹಾನಗಲ್ಲ ರಸ್ತೆಯ ಭಗತ್ ಸಿಂಗ್ ಪಿಯು ಕಾಲೇಜ್ ಸಭಾಂಗಣದಲ್ಲಿ ‘ಎಸ್‌ಎಸ್‌ಎಲ್‌ಸಿ ಪರೀಕ್ಷೋತ್ಸವ’ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಎಲ್ಲ ಬೇಸರ ಕಳೆದು ಉತ್ಸವದ ರೀತಿಯಲ್ಲಿ ಆಚರಿಸುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ, ಮನೋಧೈರ್ಯ ತುಂಬಿ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಧಾರವಾಡದ ಖ್ಯಾತ ಮನೋವೈದ್ಯರಾದ ಡಾ.ಆನಂದ ಪಾಂಡುರಂಗಿ ಹಾಗೂ ಖ್ಯಾತ ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುರೇಶ ಹುಗ್ಗಿ, ಡಯಟ್ ಪ್ರಾಚಾರ್ಯರಾದ ಗಿರೀಶ ಪದಕಿ, ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಇತರ ಗಣ್ಯರು ಭಾಗವಹಿಸಲಿದ್ದಾರೆ.