

ಹಾವೇರಿ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಪರಿವರ್ತನೆಯ ಹರಿಕಾರರು. ಧ್ವನಿ ಇಲ್ಲದವರಿಗೆ ಧ್ವನಿಯಾದ ಶ್ರೇಷ್ಠ ಸಾಧಕರು. ಸಾಮಾಜಿಕ ಮತ್ತು ಆರ್ಥಿಕವಾಗಿ ಕ್ರಾಂತಿ ಮಾಡುವ ಮೂಲಕ ರಾಜಕಾರಣದಲ್ಲಿ ಧ್ರುವತಾರೆಯಾಗಿ ಮಿಂಚಿದವರು ಎಂದು ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ನಗರದ ಗುರುಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅರಸು ಅವರು ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಶೋಷಿತರನ್ನು ಸಮಾಜದ ಮುಖ್ಯಹಾನಿಗೆ ತಂದರು ಹಾಗೂ ಎಲ್ಲ ವರ್ಗಗಳಿಗೆ ಅಧಿಕಾರ ನೀಡಿದ ಧೀಮಂತ ನಾಯಕ ಎಂದು ಬಣ್ಣಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜೀಗೌಡ್ರ ಮಾತನಾಡಿ, ಹಿಂದುಳಿದ ವರ್ಗಗಳ ಅಭ್ಯುದಯಕ್ಕಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದ ದಕ್ಷ ಆಡಳಿತಗಾರ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಡಿ.ದೇವರಾಜ ಅರಸು ಅವರು ಕರ್ನಾಟಕ ಕಂಡ ದಾರ್ಶನಿಕ ರಾಜಕಾರಣಿ, ಗಾಂಧೀಜಿ ಹಾಗೂ ಲೋಹಿಯಾ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡವರು. ಸಮ ಸಮಾಜ ನಿರ್ಮಾಣದ ಕನಸು ಕಂಡವರು ಹಾಗೂ ಹಿಂದುಳಿದ ವರ್ಗಗಳ ಏಳ್ಗೆಗೆ ಶ್ರಮಿಸಿದವರು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಮಾತನಾಡಿ, ಡಿ.ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಭೂ ಸುಧಾರಣಾ ಕಾಯ್ದೆ ಜಾರಿಗೆ ತಂದ ಮಹಾನ್ ನಾಯಕ. ಅವರ ಜೀವನ ಕುರಿತು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.
ಉಪನ್ಯಾಸಕ ಶೇಖರ ಭಜಂತ್ರಿ ಅರಸು ಅವರ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದರು. ಅರಸು ಅವರಿಗೆ ಬಡ, ಶೋಷಿತರ ಸಂಕಷ್ಟ ಗೊತ್ತಿತ್ತು. ಹಾಗಾಗಿ ಕೆಳವರ್ಗದ ಜನರಿಗೆ ನ್ಯಾಯ ಒದಗಿಸುವ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಡವರ ಹಾಗೂ ಶೋಷಿತರ ಧ್ವನಿಯಾದರು ಎಂದರು.
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳು ಹಾಗೂ ಮುರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನಂತರ ವಸತಿ ನಿಲಯಗಳ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಅಬಕಾರಿ ಇಲಾಖೆ ಉಪ ಆಯುಕ್ತೆ ಶೈಲಜಾ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ನಗರಸಭೆ ಪೌರಾಯುಕ್ತ ಪರಶುರಾಮ ಚಲವಾದಿ, ಆರ್.ವಿ.ಚಿನ್ನಿಕಟ್ಟಿ, ಎಂ.ಎಸ್.ಕೋರಿಶಟ್ಟರ್, ಲತಾ, ಎಂ.ಎಂ.ಮೈದೂರ, ರಮೇಶ ಆನವಟ್ಟಿ, ಹುಲ್ಲಪ್ಪ ಜಾಡರ, ಬಸವರಾಜ ದೊಡ್ಡಮನಿ, ಮೋಹನಸಿಂಗ್ ರಜಪೂತ, ಇತರರು ಉಪಸ್ಥಿತರಿದ್ದರು.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ ಕೆ.ಎನ್. ಸ್ವಾಗತಿಸಿದರು. ಶಿಕ್ಷಕ ನಾಗರಾಜ ನಡುವಿನಮಠ ನಿರೂಪಿಸಿದರು. ನಿಲಯಪಾಲಕ ಎಂ.ಎನ್.ಸಿದ್ದಪ್ಪನವರ ವಂದಿಸಿದರು.
ಆಕರ್ಷಕ ಮೆರವಣಿಗೆ
ನಗರದ ಪುರಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ಡಿ.ದೇವರಾಜ ಅರಸು ಅವರ ಭಾವಚಿತ್ರ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಚಾಲನೆ ನೀಡಿದರು. ವಿವಿಧ ಕಲಾತಂಡಗಳು, ಕಲಾವಿದರು ಮೆರವಣಿಗೆಗೆ ರಂಗು ತಂದರು.
ಜೀತಮುಕ್ತ ಪದ್ಧತಿಯ ಹರಿಕಾರ
ಭೂ ಸುಧಾರಣೆ ಕಾಯ್ದೆ, ಉಳುವವನೇ ಹೊಲದೊಡೆಯ ಕಾಯ್ದೆ, ಜೀತಮುಕ್ತ ಪದ್ಧತಿ ಹಾಗೂ ತಲೆ ಮೇಲೆ ಮಲಹೊರುವ ಪದ್ಧತಿ ನಿಷೇಧ ಕಾಯ್ದೆ ಜಾರಿಗೆ ತರುವ ಮೂಲಕ ಅರಸುರವರು ಶೋಷಿತರ ಧ್ವನಿಯಾಗಿದ್ದರು. ಕಲಾವಿದರ ಮಾಶಾಸನ, ವೃದ್ಧಾಪ್ಯ ವೇತನ, ಸ್ಟೈಫಂಡ್, ಭಾಗ್ಯಜ್ಯೋತಿ, ಉದ್ಯೋಗ ಖಾತ್ರಿ ಯೋಜನೆ, ಸೇರಿ ಅನೇಕ ಯೋಜನೆ ಜಾರಿಗೊಳಿಸಿದರು. ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯ ಎಂದು ನಾಮಕಾರಣ ಮಾಡಿ, ಕನ್ನಡ ಆಡಳಿತ ಭಾಷೆಯನ್ನಾಗಿಸಿದರು ಎಂದು ಡಿಸಿ ದಾನಮ್ಮನವರ ಹೇಳಿದರು.