

ಹಾವೇರಿ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಬಹುಮುಖ ಪ್ರತಿಭೆಯಾಗಿದ್ದು, ಅಸ್ಪಸ್ಯತೆ ಹೋಗಲಾಡಿಸಲು ಶ್ರಮಿಸಿದ ಹಾಗೂ ಧಮನಿತರಿಗೆ ಧ್ವನಿ ನೀಡಿದ ಧೀಮಂತ ನಾಯಕ. ಶ್ರೇಷ್ಠವಾದ ಸಂವಿಧಾನ ರಚಿಸುವ ಮೂಲಕ ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು ಎಂದು ಜವಳಿ, ಕಬ್ಬು ಅಭಿವೃದ್ಧಿ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಬಣ್ಣಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಪರಿಶಿಷ್ಟ ಜಾತಿಗಳ ಒಕ್ಕೂಟಗಳ ಸಹಯೋಗದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರ 118ನೇ ಜನ್ಮ ದಿನಾಚರಣೆ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಡಾ.ಬಿ.ಆರ್ ಅಂಬೇಡ್ಕರ್ ಅವರು ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಿಗಬೇಕು ಎನ್ನುವುದು ಅವರ ಆಶಯವಾಗಿತ್ತು. ಅದನ್ನು ಸಂವಿಧಾನದ ಮೂಲಕ ನೀಡಿದರು. ಅವರು ಹಾಕಿದ ಭದ್ರಬುನಾದಿ ಸಂವಿಧಾನದ ಅಡಿಯಲ್ಲಿ 75 ವರ್ಷವರೆಗೆ ಸಾಗಿ ಬಂದಿದೆ. ಪ್ರಜಾಪ್ರಭುತ್ವದಲ್ಲಿ ವ್ಯಕ್ತಿ ವ್ಯಕ್ತಿಗಳ ಮಧ್ಯೆ ಸಂಘರ್ಷ ಸಹಜ, ಸಾವಿರಾರು ಜಾತಿ ಹಾಗೂ ನೂರಾರು ಭಾಷೆಗಳಿದ್ದರೂ ಸಹ ವಿವಿಧತೆಯಲ್ಲಿ ಏಕತೆ ಕಾಣುವ ರಾಷ್ಟ್ರ ಭಾರತ ದೇಶ ಎಂದು ಹೇಳಿದರು.
ಡಾ.ಬಾಬು ಜಗಜೀವನರಾಮ್ ಅವರು ಸ್ವಾತಂತ್ರ್ಯ ಪೂರ್ವದಲ್ಲಿ 38 ಕೋಟಿ ಜನರಿಗೆ ಆಹಾರ ಸಮಸ್ಯೆ ಎದುರಿಸುವ ಸಮಯದಲ್ಲಿ ಅವರು ಆಹಾರ ಉತ್ಪಾದನೆಯಲ್ಲಿ ಮಾಡಿದ ಕ್ರಾಂತಿಯಿಂದ ಅವರನ್ನು ಹಸಿರು ಕ್ರಾಂತಿಯ ಹರಿಕಾರ ಎಂದು ಕರೆಯಲಾಗುತ್ತಿದೆ ಎಂದು ಹೇಳಿದರು.
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ ಅಜೀಮ್‌ಪೀರ ಖಾದ್ರಿ ಮಾತನಾಡಿ, ಭಾರತ ಸಂವಿಧಾನ ಜಗತ್ತಿಗೆ ಮಾದರಿಯಾಗಿದೆ. ಡಾ.ಬಿ.ಆರ್ ಅಂಬೇಡ್ಕರ ಅವರು ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ನೀಡಿದ್ದಾರೆ ಎಂದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್ ಪಾಟೀಲ ಮಾತನಾಡಿ, ಬಿ.ಆರ್ ಅಂಬೇಡ್ಕರ್ ನಮ್ಮ ಹಕ್ಕು ಮತ್ತು ಕರ್ತವ್ಯಗಳ ಕುರಿತು ತಿಳಿಸಿಕೊಟ್ಟಿದ್ದಾರೆ. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳುವುದರ ಜತೆಗೆ ಕರ್ತವ್ಯಗಳನ್ನು ಪಾಲಿಸಬೇಕು ಎಂದರು.
ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ದೇಶ ಕಂಡ ಎರಡು ದಿವ್ಯ ಚೇತನಗಳು. ಡಾ.ಬಿ.ಆರ್.ಅಂಬೇಡ್ಕರ್ ಅಸ್ಪಷ್ಯತೆಯ ನಡುವೆಯೂ ಕಷ್ಟಪಟ್ಟು ಓದಿ 32 ಪದವಿಗಳನ್ನು ಪಡೆದರು. 63 ದೇಶಗಳ ಸಂವಿಧಾನ ಅಧ್ಯಯನ ಮಾಡಿ, ಶ್ರೇಷ್ಠವಾದ ಸಂವಿಧಾನ ರಚಿಸಿದರು ಎಂದರು.
ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಉಪನ್ಯಾಸಕ ಡಾ.ಮಾಲತೇಶ ಪೂಜಾರ ಹಾಗೂ ಬೆಳಗಾವಿ ರಾಣಿಚನ್ನಮ್ಮ ವಿವಿ ಉಪನ್ಯಾಸಕ ಡಾ.ಹನುಮಂತಪ್ಪ ಸಂಜೀವಣ್ಣನವರ ವಿಶೇಷ ಉಪನ್ಯಾಸ ನೀಡಿದರು. ಶ್ರೀಕಾಂತ ಮೇಗಳಮನಿ ಸಂವಿಧಾನ ಪೀಠಿಕೆ ಪ್ರತಿಜ್ಞಾವಿಧಿ ಬೋಧಿಸಿದರು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ, ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್ ಗಾಜಿಗೌಡ್ರ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ,ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲೂಕಾಧ್ಯಕ್ಷ ಎಂ.ಎಂ ಮೈದೂರ, ಕೆ.ಎಂ.ಎಎಫ್ ಅಧ್ಯಕ್ಷ ಮಂಜನಗೌಡ ಪಾಟೀಲ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್., ಜಿಪಂ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಉಪ ವಿಭಾಗಾಧಿಕಾರಿ ಎಚ್.ಬಿ ಚನ್ನಪ್ಪ, ತಹಸೀಲ್ದಾರ್ ಶರಣಮ್ಮ, ಸಮಾಜದ ಪ್ರಮುಖರಾದ ಸಂಜಯಗಾಂಧಿ ಸಂಜೀವಣ್ಣನವರ, ಶ್ರೀಧರ ದೊಡ್ಡಮನಿ, ಹೊನ್ನಪ್ಪ ತಗಡಿಮನಿ, ಉಡಚಪ್ಪ ಮಾಳಗಿ, ಮಲ್ಲೇಶಪ್ಪ ಮದಲೇರ, ಮಾಲತೇಶ, ಶ್ರೀಕಾಂತ, ಎಸ್.ಎಸ್ ಮತ್ತಿಕಟ್ಟಿ, ಅಶೋಕ ಮರಿಯಣ್ಣನವರ, ಮಾರುತಿ ಬಣಕಾರ, ರಮೇಶ ಆನವಟ್ಟಿ, ಇತರರು ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಸ್ವಾಗತಿಸಿದರು. ಸಹಾಯಕ ನಿರ್ದೇಶಕ ಆಂಜನೇಯ ಹುಲ್ಲಾಳ ನಿರೂಪಿಸಿದರು.
ಸಾಧಕರಿಗೆ ಸನ್ಮಾನ:
ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ, ದ್ವಿತೀಯ ಸ್ಥಾನ ಪಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಹಾಗೂ ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳು, ಪೌರಕಾರ್ಮಿಕರು ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ ಜೇಕನಕಟ್ಟಿ ವಸತಿ ಶಾಲೆ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಭಾವಚಿತ್ರಗಳ ಮೆರವಣಿಗೆ
ಕಾರ್ಯಕ್ರಮಕ್ಕೂ ಮೊದಲು ಹಾವೇರಿ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ, ಜಿಲ್ಲಾಧಿಕಾರಿ ಡಾ.ವಿಜಯಹಾಂತೇಶ ದಾನಮ್ಮನವರ, ಜಿಪಂ ಸಿಇಒ ರುಚಿ ಬಿಂದಲ್, ಇತರರು ಮಾಲಾರ್ಪಣೆ ಮಾಡಿದರು. ನಂತರ ಶೃಂಗರಿಸಿದ ಸಾರೋಟಿನಲ್ಲಿ ಡಾ.ಬಾಬು ಜಗಜೀವನರಾಮ್ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಗಳ ಮೆರವಣಿಗೆ ಆರಂಭವಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಯಕ್ಷಗಾನ, ಹಗಲುವೇಷಧಾರಿಗಳ ಕಲಾ ತಂಡಗಳು ಸೇರಿದಂತೆ ವಿವಿಧ ಕಲಾ ತಂಡಗಳ ಮೂಲಕ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು.